ಬೆಳಗಾವಿ: ಇದೇ ಜನವರಿ ತಿಂಗಳಿನಲ್ಲಿ ನಡೆಯಲಿರುವ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ, ಯೋಗಿ ವೇಮನ ಜಯಂತಿ ಹಾಗೂ ಅಂಬಿಗರ ಚೌಡಯ್ಯ ಜಯಂತಿಯನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಅವರು ತಿಳಿಸಿದ್ದಾರೆ.
ಮೂರೂ ಜಯಂತಿಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜ.15 ರಂದು ಶ್ರೀ ಶಿವಯೋಗಿ ಸಿದ್ದರಾಮೇಶ್ವರರ ಜಯಂತಿ; ಜ.19 ರಂದು ಮಹಾಯೋಗಿ ವೇಮನ ಜಯಂತಿ ಹಾಗೂ ಜ.21 ರಂದು ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಆಚರಿಸಲಾಗುವುದು. ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಕಡಿಮೆ ಜನರು ಭಾಗವಹಿಸುವ ಮೂಲಕ ಜಯಂತಿಯನ್ನು ಆಚರಿಸಲಾಗುವುದು ಎಂದು ತಿಳಿಸಿದರು. ವೇಮನ ಜಯಂತಿಯನ್ನು ಸದಾಶಿವ ನಗರದಲದಲಿರುವ ರೆಡ್ಡಿ ಭವನದಲ್ಲಿ ಆಚರಿಸಲಾಗುವುದು. ಅದೇ ರೀತಿ ಅಂಬಿಗರ ಚೌಡಯ್ಯ ಜಯಂತಿಯನ್ನು ಮತ್ತು ಸಿದ್ಧರಾಮೇಶ್ವರ ಜಯಂತಿಯನ್ನು ಕಲಾಮಂದಿರ ಆವರಣದಲ್ಲಿರುವ ಬಸವರಾಜ ಕಟ್ಟೀಮನಿ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಎಚ್. ಭಜಂತ್ರಿ ಅವರು ಸಿದ್ಧತೆಗಳ ಕುರಿತು ವಿವರಿಸಿದರು. ಸಮುದಾಯದ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.