ಬುಡಾ ವತಿಯಿಂದ ಬೆಳಗಾವಿಯಲ್ಲಿ 157 ಎಕರೆ ಪ್ರದೇಶದಲ್ಲಿ ಹೊಸ ಬಡಾವಣೆ ನಿರ್ಮಾಣಕ್ಕೆ ಶೀಘ್ರವೇ ಸರ್ಕಾರದಿಂದ ಅನುಮೋದನೆ ಸಿಗಲಿದೆ. ಇದರಲ್ಲಿ ಪತ್ರಕರ್ತರಿಗೆ ಶೇ.5ರಷ್ಟು ಮೀಸಲು ಇಡಲು ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧರಿಸಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ.
ಸ್ಮಾರ್ಟ್‍ಸಿಟಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಭೈರತಿ ಬಸವರಾಜ್ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಸುಮಾರು 157 ಎಕರೆ ಪ್ರದೇಶದಲ್ಲಿ ಒಂದು ಹೊಸ ಬಡಾವಣೆ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ನಿವೇಶನ ಹಂಚಿಕೆ ಮಾಡುವ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು. ನಾನು ಬೆಂಗಳೂರಿಗೆ ಹೋದ ತಕ್ಷಣವೇ ಆ ಪ್ರಸ್ತಾವನೆಗೆ ಅನುಮೋದನೆ ಕೊಡಿಸಿ ಶೀಘ್ರವೇ ಕಾಮಗಾರಿಗೆ ಚಾಲನೆ ನೀಡುತ್ತೇನೆ ಎಂದು ಭರವಸೆ ನೀಡಿದರು. 1200 ನಿವೇಶನಗಳನ್ನು ಹಂಚಿಕೆ ಮಾಡುವ ಗುರಿ ಇಟ್ಟುಕೊಂಡಿದ್ದೇವೆ. ಪತ್ರಕರ್ತರಿಗೆ ಇದರಲ್ಲಿ ಶೇ.5ರಷ್ಟು ಮೀಸಲು ಇಡಲು ಯಡಿಯೂರಪ್ಪ ನೇತೃತ್ವದ ಸರ್ಕಾರ ನಿರ್ಧಾರ ಮಾಡಿದೆ ಎಂದು ತಿಳಿಸಿದರು.
ಇದೇ ವೇಳೆ ಸ್ಮಾರ್ಟ್‍ಸಿಟಿ ಕಾಮಗಾರಿಯಲ್ಲಿ ಅಧಿಕಾರಿಗಳು ಸಮಗ್ರವಾಗಿ ಸಿದ್ಧತೆ ಮಾಡಿಕೊಂಡಿಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು ನಗರದಲ್ಲಿ ಎಲ್ಲಿಯಾದ್ರೂ ಅವೈಜ್ಞಾನಿಕ ಕಾಮಗಾರಿ ಆಗಿದ್ದರೆ ಮತ್ತೊಮ್ಮೆ ಕಾಮಗಾರಿ ಕೈಗೊಳ್ಳುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸ್ಮಾರ್ಟ್‍ಸಿಟಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಗುಣಮಟ್ಟದ ರೀತಿಯಲ್ಲಿ ಆಗಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ ಎಂದು ತಿಳಿಸಿದರು. ಇನ್ನು ಕಣಬರಗಿ ಸ್ಕೀಮ್ ನಂಬರ್ 61ಕ್ಕೂ ಈಗಾಗಲೇ ಸರ್ಕಾರದಿಂದ ಅನುಮೋದನೆ ಸಿಕ್ಕಿದೆ. ಇನ್ನು ಆರು ತಿಂಗಳಲ್ಲಿ ಕಾಮಗಾರಿ ಆರಂಭ ಆಗಲಿದೆ ಎಂದು ಹೇಳಿದರು.
ಮುಂದುವರಿದು ಮಾತನಾಡಿದ ಸಚಿವ ಭೈರತಿ ಬಸವರಾಜ್ ಇಲಾಖೆ ಬಗ್ಗೆ ಎಲ್ಲವನ್ನು ತಿಳಿದುಕೊಂಡಿದ್ದೇನೆ. ಎಚ್ಚರಿಕೆಯಿಂದ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ. ಮಹಾತ್ಮಾ ಗಾಂಧಿ ನಗರ ಯೋಜನೆಯಡಿಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆಗೆ 125 ಕೋಟಿ ಅನುದಾನ ಬಿಡುಗಡೆ ಮಾಡಿಸಿದ್ದೇನೆ. ಭವಿಷ್ಯದಲ್ಲಿ ಬೆಳಗಾವಿ ನಗರವನ್ನು ಅತ್ಯುತ್ತಮ ನಗರವನ್ನಾಗಿ ನಿರ್ಮಾಣ ಮಾಡುವ ಗುರಿ ಇಟ್ಟುಕೊಂಡಿದ್ದೇವೆ ಎಂದು ತಿಳಿಸಿದರು.
ಇನ್ನು ಮುಂದಿನ ಸಾರಿ ಬಂದಾಗ ಬೆಳಿಗ್ಗೆಯಿಂದ ಸಾಯಂಕಾಲದವರೆಗೂ ಇಡೀ ನಗರವನ್ನು ಸುತ್ತೋಣ ಎಲ್ಲಿ ಸಮಸ್ಯೆ ಆಗಿದೆಯೋ ಅವುಗಳನ್ನು ಸರಿಪಡಿಸೋಣ ಎಂದು ಸಚಿವ ಭೈರತಿ ಬಸವರಾಜ್ ಭರವಸೆ ನೀಡಿದರು. ಈ ವೇಳೆ ಕೆಯುಐಡಿಎಫ್ ಸಿ ಅಧ್ಯಕ್ಷ ಶಂಕರ್ ಪಾಟೀಲ ಮುನೇನಕೊಪ್ಪ, ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಸೇರಿ ಇನ್ನಿತರರು ಉಪಸ್ಥಿತರಿದ್ದರು.