Banglore

ಬೆಳಗಾವಿ ಬೈಎಲೆಕ್ಷನ್ ಅಭ್ಯರ್ಥಿ ಆಯ್ಕೆ..ಕೈ ನಾಯಕರಿಂದ ಮತ್ತೆ ಮಹತ್ವದ ಮಿಟಿಂಗ್

Share

ಬೆಳಗಾವಿ ಲೋಕಸಭೆ ಬೈಎಲೆಕ್ಷನ್‍ಗೆ ಅಭ್ಯರ್ಥಿ ಆಯ್ಕೆ ಸಂಬಂಧ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಒಮ್ಮತದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಕೈ ಪಡೆ ಮುಂದಾಗಿದೆ.

ಹೌದು ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಇನ್ನು ದಿನಾಂಕ ಘೋಷಣೆ ಆಗಿಲ್ಲ. ಆದ್ರೆ ಅದಕ್ಕೂ ಮೊದಲೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ, ಕಾಂಗ್ರೆಸ್ ನಾಯಕರು ತೀವ್ರ ರಣತಂತ್ರ ಹೆಣೆಯುತ್ತಿದ್ದಾರೆ. ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಬಿಜೆಪಿ ನಾಯಕರಿಗೆ ಕ್ಷೇತ್ರವನ್ನು ಉಳಿಸಿಕೊಳ್ಳುವ ಒತ್ತಡ ಇದ್ದರೆ, ಕ್ಷೇತ್ರದಲ್ಲಿ ಸ್ಥಾನ ಪಡೆಯುವ ಪ್ರತಿಷ್ಠೆಗೆ ಕೈ ನಾಯಕರು ಬಿದ್ದಿದ್ದಾರೆ. ಹೀಗಾಗಿ ಶನಿವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಸಭೆ ಸೇರಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ್, ಮಾಜಿ ಸಚಿವ ಎಂ.ಬಿ ಪಾಟೀಲ್, ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ, ಶಾಸಕಿಯರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಈಗಾಗಲೇ ಅಭ್ಯರ್ಥಿ ಆಯ್ಕೆ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಮೂವರ ಅರ್ಜಿಯನ್ನು ಕೆಪಿಸಿಸಿಗೆ ಕಳಿಸಿದ್ದು. ಕೆಪಿಸಿಸಿಯಿಂದ ಹೈಕಮಾಂಡ್‍ಗೆ ಪಟ್ಟಿ ಕಳಿಸಲಿದ್ದಾರೆ. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಯಾರನ್ನು ಕಣಕ್ಕೆ ಇಳಿಸಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಇನ್ನು ಬಿಜೆಪಿಯಲ್ಲಿಯೂ ಅಂತೂ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಇಲ್ಲಿಯೂ ನಾನು ಮುಂದು ತಾ ಮುಂದು ಎಂದು ಟಿಕೇಟ್ ಕೇಳುತ್ತಿದ್ದಾರೆ. ಅಂತಿಮವಾಗಿ ಎರಡು ಪಕ್ಷಗಳು ನಾಯಕರು ಯಾರಿಗೆ ಮಣೆ ಹಾಕುತ್ತಾರೆ ಎಂದು ಕಾಯ್ದು ನೋಡಬೇಕಿದೆ.

 

Tags:

error: Content is protected !!