hubbali

ರಾಜ್ಯದ ಹೆದ್ದಾರಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧ..ಕೇಂದ್ರ ಸಚಿವ ನಿತಿನ್ ಗಡ್ಕರಿ ಭರವಸೆ

Share

ಭಾರತ ಸರ್ಕಾರವು ಕರ್ನಾಟಕ ರಾಜ್ಯದಲ್ಲಿನ ಹೆದ್ದಾರಿಗಳ ಅಭಿವೃದ್ಧಿಗೆ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ಚತುಷ್ಪಥ ರಸ್ತೆ ನಿರ್ಮಾಣ, ಬೆಳಗಾವಿ ಚತುಷ್ಪಥ ವರ್ತುಲ ರಸ್ತೆ ಸೇರಿದಂತೆ ಒಟ್ಟು 13 ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಎಂಎಸ್‍ಎಂಇ ಸಚಿವ ನಿತಿನ್ ಗಡ್ಕರಿ ತಿಳಿಸಿದರು.

ಇಂದು 323 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ವೃತ್ತದ ಎಲಿವೇಟೆಡ್ ಕಾರಿಡಾರ್ ಹಾಗೂ ಕಲಘಟಗಿ ತಾಲ್ಲೂಕು ದಾಸ್ತಿಕೊಪ್ಪ ಗ್ರಾಮದಲ್ಲಿ ಬೇಡ್ತಿ ನಾಲೆಗೆ ಸೇತುವೆ ನಿರ್ಮಾಣಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಹುಬ್ಬಳ್ಳಿ-ಹೊಸಪೇಟೆ ಹೆದ್ದಾರಿ ಸೇರಿದಂತೆ, ಉತ್ತರ ಕರ್ನಾಟಕದ ಪ್ರಗತಿಯಲ್ಲಿರುವ ಯೋಜನೆಗಳನ್ನೂ ಸಹ ಶೀಘ್ರವೇ ಪೂರ್ಣಗೊಳಿಸುವ ಭರವಸೆ ನೀಡಿದರು. ಕರ್ನಾಟಕ ಪ್ರಗತಿಶೀಲ ರಾಜ್ಯವಾಗಿದ್ದು, ಕೃಷಿ ಹಾಗೂ ಕೈಗಾರಿಕೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಬಡತನ ನಿರ್ಮೂಲನೆಗೆ ರಾಜ್ಯ ಸರ್ಕಾರದೊಂದಿಗೆ ಕೈ ಜೋಡಿಸಿ ಶ್ರಮಿಸುವುದಾಗಿ ಸಚಿವರು ಹೇಳಿದರು. ಸಾರಿಗೆ ವಲಯದಲ್ಲಿ ಹಸಿರು ಇಂಧನ ಬಳಕೆಗೆ ಆದ್ಯತೆ ನೀಡುವ ಮೂಲಕ ರೈತರಿಗೂ ಅನುಕೂಲವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಒಂದು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ಎರಡನೇ ಬಾರಿಗೆ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು. ರಾಣಿ ಚೆನ್ನಮ್ಮ ವೃತ್ತದ ಎಲಿವೇಟೆಡ್ ಕಾರಿಡಾರ್ ಹಾಗೂ ದಾಸ್ತಿಕೊಪ್ಪ ಗ್ರಾಮದ ಬೇಡ್ತಿ ನಾಲಾ ಮೇಲಿನ ಸೇತುವೆ ನಿರ್ಮಾಣದಿಂದ ಅಂಕೋಲಾ-ಗುತ್ತಿ ಹೆದ್ದಾರಿಯಲ್ಲಿ ಸುಗಮ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು. ರಾಜ್ಯದಲ್ಲಿ 1.16 ಲಕ್ಷ ಕೋಟಿ ರೂ.ಗಳನ್ನು ಹೆದ್ದಾರಿ ಅಭಿವೃದ್ಧಿಗಾಗಿ ಹೂಡಿಕೆ ಮಾಡುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ರಾಜ್ಯದ ಎಲ್ಲ ಹೆದ್ದಾರಿ ಯೋಜನೆಗಳು ಕಾಲಬದ್ಧವಾಗಿ ಪೂರ್ಣಗೊಳ್ಳಲು ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರಿಗೆ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಡಿಸಿಎಂ ಗೋವಿಂದ ಕಾರಜೋಳ, ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರುಗಳಾದ ಸಿ.ಎಂ.ನಿಂಬಣ್ಣವರ, ಅಬ್ಬಯ್ಯ ಪ್ರಸಾದ್, ಅರವಿಂದ ಬೆಲ್ಲದ, ಅಮೃತ ದೇಸಾಯಿ, ಬಸವರಾಜ ಹೊರಟ್ಟಿ, ಭಾಗವಹಿಸಿದ್ದರು.

 

Tags:

error: Content is protected !!