State

ಶಾಸಕರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ: ಕುಂದುಕೊರತೆ, ಅನುದಾನ ಸೇರಿ ಮಹತ್ವದ ವಿಷಯ ಚರ್ಚೆ

Share

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದ ಶಾಸಕರ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಿದರು. ಶಾಸಕರ ಕುಂದುಕೊರತೆಗಳು, ಅನುದಾನ ಬಿಡುಗಡೆ, ಕ್ಷೇತ್ರದಲ್ಲಿ ಬಾಕಿ ಇರುವ ಕಾಮಗಾರಿಗಳು ಸೇರಿದಂತೆ ಮತ್ತಿತರ ಪ್ರಮುಖ ವಿಷಯಗಳ ಬಗ್ಗೆ ಸುಧೀರ್ಘ ಚರ್ಚೆ ನಡೆಸಿದರು.

; ಸಂಕ್ರಾಂತಿ ನಂತರ ಯಡಿಯೂರಪ್ಪ ಕುರ್ಚಿ ಅಸ್ಥಿರವಾಗಲಿದೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅಭಿಪ್ರಾಯ ವ್ಯಕ್ತಪಡಿಸುತ್ತಿರುವ ಹೊತ್ತಿನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಶಾಸಕರ ವಿಶ್ವಾಸ ಗೆಲ್ಲುವ ಪ್ರಯತ್ನಕ್ಕೆ ಕೈ ಹಾಕಿರುವುದು ತೀವ್ರ ಕುತೂಹಲಕ್ಕೂ ಕಾರಣವಾಗಿದೆ.

ಬೆಳಗ್ಗೆ 11.30ರಿಂದ 1 ಗಂಟೆವರೆಗೆ ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳ 17 ಶಾಸಕರ ಜೊತೆ ಸಮಾಲೋಚನಾ ಸಭೆ ನಡೆಸಿದರು. ಮಧ್ಯಾಹ್ನ ಮುಂಬೈ ಕರ್ನಾಟಕ ಭಾಗದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹುಬ್ಬಳ್ಳಿ , ಧಾರವಾಡ, ಹಾವೇರಿ, ಗದಗ, ಮಧ್ಯ ಕರ್ನಾಟಕದ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳ ಶಾಸಕರ ಸಭೆ ನಡೆಯಲಿದೆ.
ಸಂಜೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣಕನ್ನಡ ಮತ್ತು ಉತ್ತರಕನ್ನಡ ಜಿಲ್ಲೆಗಳ ಶಾಸಕರ ಸಭೆ ನಿಗದಿಯಾಗಿದೆ.

ಒಬ್ಬೊಬ್ಬ ಶಾಸಕರಿಂದಲೂ ಅಭಿಪ್ರಾಯವನ್ನು ಪಡೆದ ಮುಖ್ಯಮಂತ್ರಿಯವರು ಕೋವಿಡ್ ಕಾರಣದಿಂದ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ವಿಳಂಬವಾಗಿದೆ. ಹಂತ ಹಂತವಾಗಿ ಕ್ಷೇತ್ರಗಳಿಗೆ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಶೀಘ್ರದಲ್ಲೇ ಜಿಲ್ಲಾ ಉಸ್ತುವಾರಿಗಳ ಸಭೆ ನಡೆಸಲಿದ್ದೇನೆ. ಶಾಸಕರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಪರಿಗಣಿಸಬೇಕು. ನೀವು ಜಿಲ್ಲೆಗಳಿಗೆ ಭೇಟಿ ನೀಡಿದ ವೇಳೆ , ಶಾಸಕರಿಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು. ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳಿಗೂ ಮಾಹಿತಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಶಾಸಕರಿಗೆ ಭರವಸೆ ನೀಡಿದ್ದಾರೆ.

Tags:

error: Content is protected !!