ಜ.11ರಿಂದ ಜ.13ವರೆಗೆ ಜಿಲ್ಲಾ ಪಂಚಾಯತಿ ಹಾಗೂ ತಾಲೂಕಾ ಪಂಚಾಯತಿ ಚುನಾವಣೆ ಹಿನ್ನೆಲೆ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ “ಜನಸೇವಕ ಸಮಾವೇಶ ಹಮ್ಮಿಕೊಳ್ಳುತ್ತಿದ್ದು. ಜನವರಿ 16 ಅಥವಾ ಜನವರಿ 17ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಭಾಗಿಯಾಗುವ ನಿರೀಕ್ಷೆಯಿದೆ
ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದ್ದು. ಮೂರು ದಿನಗಳ ಕಾಲ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿಯೂ ಬಿಜೆಪಿ ನಾಯಕರು ಜನಸೇವಕ ಸಮಾವೇಶ ನಡೆಸಲಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಗ್ರಾಮ ಸ್ವರಾಜ್ಯ ಸಮಾವೇಶ ನಡೆಸಿದಂತೆ ಜಿಲ್ಲಾ ಪಂಚಾಯತಿ, ತಾಲೂಕಾ ಪಂಚಾಯತಿ ಚುನಾವಣೆ ಹಿನ್ನೆಲೆ ಜನಸೇವಕ ಸಮಾವೇಶ ಆಯೋಜಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಮೂರನೇ ತಂಡದ ನೇತೃತ್ವವನ್ನು ಡಿಸಿಎಂ ಗೋವಿಂದ ಕಾರಜೋಳ ಅವರು ವಹಿಸಿದ್ದು. ಈ ತಂಡದಲ್ಲಿ ಸಚಿವರಾದ ವಿ.ಸೋಮಣ್ಣ, ರಮೇಶ್ ಜಾರಕಿಹೊಳಿ, ರಾಜ್ಯ ಎಸ್ಟಿ ಮೋರ್ಚಾ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್, ರಾಜ್ಯ ಉಪಾಧ್ಯಕ್ಷರಾದ ತೇಜಸ್ವಿನಿ ಅನಂತಕುಮಾರ್ ಇರುವ ಈ ತಂಡದ ಸಂಚಾಲಕರಾಗಿ ರಾಜ್ಯ ಕಾರ್ಯದರ್ಶಿ ತುಳಸಿ ಮುನಿರಾಜು ಅವರು ಕಾರ್ಯ ನಿರ್ವಹಿಸುವರು. ಈ ತಂಡವು 11ರಂದು ಬೆಳಗಾವಿ, ಚಿಕ್ಕೋಡಿ, 12ರಂದು ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆ, 13ರಂದು ಗದಗ್ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿದೆ. ಅದೇ ರೀತಿ ಇನ್ನು ಮೂರು ತಂಡಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿವೆ. ಅಂತಿಮವಾಗಿ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭವು ಇದೇ ಜನವರಿ 16 ಅಥವಾ 17ರಂದು ಬೆಂಗಳೂರಿನಲ್ಲಿ ನಡೆಯಲಿದ್ದು. ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಭಾಗವಹಿಸುವ ಸಾಧ್ಯತೆಯಿದೆ.
ಒಟ್ಟಾರೆ ಪ್ರತಿ ಚುನಾವಣೆಗೂ ತಮ್ಮ ರಾಜಕೀಯ ತಂತ್ರಗಾರಿಕೆ ಮುಂದುವರಿಸಿರುವ ಬಿಜೆಪಿ ನಾಯಕರು ಈಗ ಜಿಲ್ಲಾ ಪಂಚಾಯತಿ ಮತ್ತು ತಾಲೂಕಾ ಪಂಚಾಯತಿ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ.