ವಾಲ್ಮೀಕಿ ಪೀಠದಿಂದ ರಾಜ್ಯದಲ್ಲಿ ಅಂಗನವಾಡಿಯಿಂದ ಹಿಡಿದು ಉನ್ನತ ಶಿಕ್ಷಣದವರೆಗೆ ಎಲ್ಲ ರೀತಿಯ ಶಿಕ್ಷಣ ನೀಡಲು ಸಂಸ್ಥೆಗಳನ್ನು ತೆರೆಯಲು ಯೋಜಿಸಲಾಗಿದ್ದು, ಇದಕ್ಕಾಗಿ ಸರಕಾರ ನೆರವು ನೀಡಬೇಕು, ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಿಸಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ ಹಮ್ಮಿಕೊಳ್ಳಲಾಗಿದ್ದ 3 ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರೆ ಮತ್ತು ಜನಜಾಗೃತಿ ಸಮಾವೇಶದ ಅಧ್ಯಕ್ಷತೆ ವಹಿಸಿ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿ, ನಾಯಕ ಜನಾಂಗದ ಸಮಗ್ರ ಪ್ರಗತಿಗಾಗಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಯೋಜಿಸಲಾಗಿದೆ. ಇದಕ್ಕಾಗಿ ಪಕ್ಷಾತೀತವಾಗಿ ಸಮಾಜದ ಮುಖಂಡರ ಸಹಕಾರ ಕೋರಲಾಗುವುದು. ಸರಕಾರ ಅನುಕೂಲ ಮಾಡಿಕೊಡಬೇಕು ಎಂದರು.
ಇನ್ನು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ತಲಾ 10 ಎಕರೆ ಜಾಗ ಕಾಯ್ದಿರಿಸಿ ವಸತಿ ನಿಲಯ ಸ್ಥಾಪಿಸಲು ಯೋಜಿಸಲಾಗಿದೆ. ನಾಯಕ ಜನಾಂಗದ ಮಕ್ಕಳು ಶಿಕ್ಷಣಕ್ಕೆ ಅನುಕೂಲ ಕಲ್ಪಿಸಲು ಯೋಜಿಸಲಾಗಿದೆ ಎಂದರು.ಇನ್ನು ರಾಜ್ಯದ ಎಲ್ಲೆಡೆ ನೆಲೆಸಿರುವ ನಾಯಕ ಸಮಾಜಕ್ಕೆ ಅನುಕೂಲ ಮಾಡಿಕೊಡಲು ನೀರಾವರಿ ಸೌಲಭ್ಯ ಒದಗಿಸಬೇಕಾಗಿದೆ. ಇದಕ್ಕಾಗಿ ಹೆಚ್ಚಿನ ಅನುದಾನ ನೀಡಿ ಜನಾಂಗದ ಕೃಷಿ ಚಟುವಟಿಕೆಗಳಿಗೆ ಅನುವು ಮಾಡಿಕೊಡಬೇಕು ಎಂದು ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.
ವಾಲ್ಮೀಕಿ ನಾಯಕ ಸಮಾಜಕ್ಕೆ ಮೀಸಲಾತಿ ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಿಸಬೇಕು ಎಂದು ಅವರು ಆಗ್ರಹಿಸಿದರು.
ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಹಾಜರಿದ್ದರು. ಚಲನಚಿತ್ರ ನಟ ಸುದೀಪ್ ಅವರಿಗೆ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.