ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಅವರು ಜಂಟಿ ಸಮಾಲೋಚನೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸರಕಾರಿ ನೌಕರರ ಸಮಸ್ಯೆಗಳನ್ನು ಆಲಿಸಿ ಪರಿಹಾರದ ಭರವಸೆ ನೀಡಿದರು.

ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳೊಂದಿಗೆ ಬೆಳಗಾವಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಭೆ ನಡೆಸಿದರು. ಸರಕಾರಿ ನೌಕರರ ವೇತನ, ಪದೋನ್ನತಿ, ಮಹಿಳೆಯರಿಗೆ ಶೌಚಾಲಯ, ವಿಶ್ರಾಂತಿ ಕೊಠಡಿ ಸೇರಿದಂತೆ ನೌಕರರ ಹಲವು ಸಮಸ್ಯೆಗಳನ್ನು ಈ ಸಂದರ್ಭದಲ್ಲಿ ಪ್ರಸ್ತಾವಿಸಲಾಯಿತು. ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿ, ಸ್ಥಳೀಯವಾಗಿ ಬಗೆಹರಿಸುವ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ರೂಪಿಸುವುದಾಗಿ ತಿಳಿಸಿದರು. ಉಳಿದ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ವೈದ್ಯಕೀಯ ವೆಚ್ಚ ಮರುಪಾವತಿ ಬಿಲ್‍ಗಳು ವಿಳಂಬವಾಗುತ್ತಿದ್ದು, ಇದರಿಂದ ಚಿಕಿತ್ಸೆ ಪಡೆದ ನೌಕರರಿಗೆ ತೊಂದರೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಾತ್ರ ಜಿಲ್ಲಾ ಪಂಚಾಯಿತಿ ವತಿಯಿಂದ ಕಮೀಟಿ ರಚನೆ ಮಾಡಿದ್ದು, ಇದರಿಂದ ಬಿಲ್‍ಗಳು ವಿಳಂಬವಾಗುತ್ತಿವೆ. ಜಿಲ್ಲಾ ಶಸ್ತ್ತಚಿಕಿತ್ಸಕರು ಬಿಲ್‍ಗಳಿಗೆ ಸಹಿ ಮಾಡುತ್ತಿಲ್ಲ ಎಂದು ನೌಕರರು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ, ಈ ಕುರಿತು ಸಂಬಂಧಿಸಿದ ಅಧಿಕಾರಿಗೆ ನೋಟಿಸ್ ಜಾರಿ ಮಾಡಲು ಸೂಚನೆ ನೀಡಿದರು.
ಸಭೆಯಲ್ಲಿ ನೌಕರರ ಸಂಘದ ಅಧ್ಯಕ್ಷ ಜಗದೀಶಗೌಡ ಪಾಟೀಲ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸೇರಿದಂತೆ ಆರೋಗ್ಯ, ಶಿಕ್ಷಣ, ಕಂದಾಯ ಸೇರಿದಂತೆ ಸರಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ನೌಕರರ ಸಂಘದ ಅಧ್ಯಕ್ಷ ಜಗದೀಶಗೌಡ ಪಾಟೀಲ ಮಾತನಾಡಿ, ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ಸಭೆಯಲ್ಲಿ ನೌಕರರ ಪ್ರಮುಖ ಸಮಸ್ಯೆಗಳು ಚರ್ಚೆಯಾದವು. ಎಲ್ಲ ಸಮಸ್ಯೆಗಳಿಗೂ ಜಿಲ್ಲಾಧಿಕಾರಿ ಪರಿಹಾರದ ಭರವಸೆ ನೀಡಿದರು ಎಂದರು.
ಇನ್ನು ಫೆಬ್ರವರಿ 5,6ರಂದು ಸರಕಾರಿ ನೌಕರರ ಕ್ರೀಡಾಕೂಟ ನಡೆಯಲಿದ್ದು, ಸಂಜೆ ಸಂಗೀತೋತ್ಸವ ಏರ್ಪಡಿಸಲಾಗಿದೆ. ಇದರಲ್ಲಿ ಸರಕಾರಿ ನೌಕರರ ಕುಟುಂಬವರ್ಗದವರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಇನ್ನು ವೈದ್ಯಕೀಯ ವೆಚ್ಚ ಮರುಪಾವತಿ ಬಿಲ್‍ಗಳು ವಿಳಂಬವಾಗುತ್ತಿರುವ ಕುರಿತು ಕ್ರಮ ಕೈಗೊಳ್ಳಲು ಸೂಚಿಸಿದರು. ಒಂದು ವೇಳೆ ಫೆಬ್ರವರಿ 15ರೊಳಗೆ ಸಮಸ್ಯೆಗಳು ಪರಿಹಾರ ಆಗದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಜಗದೀಶಗೌಡ ತಿಳಿಸಿದರು.
ಜಂಟಿ ಸಮಾಲೋಚನೆ ಸಭೆಯಲ್ಲಿ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.