ಹಿಜಾಬ್-ಕೇಸರಿ ವಿವಾದ ರಾಜ್ಯದಲ್ಲಿ ದೊಡ್ಡ ಮಟ್ಟದ ಚರ್ಚೆ ಶುರುವಾಗಿರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆ ಸಂಭವಿಸಬಾರದು ಎಂಬ ಉದ್ದೇಶದಿಂದ ಮೂರು ದಿನಗಳ ಕಾಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೌದು ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ. ಒಂದು ಕಡೆ ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ವಿದ್ಯಾರ್ಥಿನಿಯರು ಹೋರಾಟ ಮಾಡುತ್ತಿದ್ದರೆ, ಇನ್ನೊಂದು ಕಡೆ ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಅಂತ ಹಿಂದೂ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಹಿಜಾಬ್ ಪರವಾಗಿ ಕೋರ್ಟ್ ತೀರ್ಪು ನೀಡಿದರೆ ನಮ್ಮ ಹೋರಾಟ ಮುಂದುವರಿಯುತ್ತದೆ ಅಂತ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆ ಕರ್ನಾಟಕ ಸರ್ಕಾರ ಮೂರು ದಿನಗಳ ಕಾಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದೆ. ರಜೆ ಕುರಿತು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಿಎಂ ಬೊಮ್ಮಾಯಿ ಅವರು ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಪ್ರೌಢಶಾಲೆ, ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ ಎಂದಿದ್ದಾರೆ.

ಅದೇ ರೀತಿ ಶಾಲಾ-ಕಾಲೇಜುಗಳಿಗೆ ರಜೆ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಅವರು ರಾಜ್ಯದ ಕಾಲೇಜುಗಳಲ್ಲಿ ಸಮವಸ್ತ್ರ ವಿವಾದ ಹಿನ್ನೆಲೆಯಲ್ಲಿ ನಾಳೆಯಿಂದ 3 ದಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಿಜಾಬ್ ವಿಚಾರದಲ್ಲಿ ಸರ್ಕಾರ ಈಗಾಗಲೇ ತನ್ನ ನಿರ್ಧಾರ ಹೇಳಿದೆ. ಆದರೂ ಕೆಲ ಕಡೆ ಸ್ಥಿತಿ ಗಂಭೀರವಾಗಿದೆ. ಇದರ ಬಗ್ಗೆ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಎಲ್ಲಾ ಹೈಸ್ಕೂಲ್, ಪಿಯು ಕಾಲೇಜು, ಡಿಗ್ರಿ ಕಾಲೇಜು ಮತ್ತು ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದರು.
ಇನ್ನು ನಾಳೆಯಿಂದ 3 ದಿನ ಪ್ರೌಢಶಾಲೆ-ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಆದರೆ 1 ರಿಂದ 7ನೇ ತರಗತಿವರೆಗೆ ಶಾಲೆ ಎಂದಿನಂತೆ ತರಗತಿ ನಡೆಯಲಿವೆ. ಒಟ್ಟಿನಲ್ಲಿ ಹಿಜಾಬ್ ವರ್ಸಸ್ ಕೇಸರಿ ವಿವಾದ ಇನ್ನು ಯಾವ ಸ್ವರೂಪ ಪಡೆದುಕೊಳ್ಳುತ್ತದೆಯೋ ಕಾದು ನೋಡಬೇಕಿದೆ.