ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಾದ ಕೋಟ್ಯಂತರ ರೂಪಾಯಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್, ನೈತಿಕತೆಯ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ವಾಲ್ಮೀಕಿ ನಿಗಮ ಹಣ ವರ್ಗಾವಣೆ ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಸಣ್ಣ ನೆಪ ಮಾತ್ರ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇರ ಪಾತ್ರವಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಯ ಗಮನಕ್ಕೆ ಬಾರದೆ 187 ಕೋಟಿ ರೂ. ಮೊತ್ತದ ಹಗರಣ ನಡೆಯಲು ಸಾಧ್ಯವೇ ಇಲ್ಲ. ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಲೋಕಸಭಾ ಚುನಾವಣೆಗಾಗಿ ರಾಹುಲ್ ಗಾಂಧಿ ಬಳಗಕ್ಕೆ ಈ ಹಣ ತಲುಪಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕಾಂಗ್ರೆಸ್ನ ದುರದೃಷ್ಟವೆಂಬಂತೆ ಪ್ರಾಮಾಣಿಕ ಅಧಿಕಾರಿಯ ಆತ್ಮಹತ್ಯೆಯಿಂದಾಗಿ ಹಗರಣ ಹೊರ ಬಂದಿದೆ. ಈಗ ಇದನ್ನು ಮುಚ್ಚಿ ಹಾಕಲು ಎಲ್ಲ ಬಗೆಯ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಆರ್. ಅಶೋಕ್ ಆರೋಪಿಸಿದ್ದಾರೆ.
ವಿಶೇಷ ತನಿಖಾ ದಳ ಯಾರು ಯಾರನ್ನೋ ವಿಚಾರಣೆ ಮಾಡುತ್ತಿದೆ. ಆದರೆ ಈವರೆಗೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಕೂರಿಸಿ ವಿಚಾರಣೆ ನಡೆಸಿಲ್ಲ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಗಳ ಬಳಿ ಪೊಲೀಸರು ಯಾವುದೇ ಪ್ರಶ್ನೆಗಳನ್ನು ಕೇಳಿಲ್ಲ. ಹಣಕಾಸು ಇಲಾಖೆಯ ಗಮನಕ್ಕೆ ಬಾರದೆ ಇದು ನಡೆದಿಲ್ಲ ಎಂದಾದ ಮೇಲೆ ಸಿದ್ದರಾಮಯ್ಯ ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.
ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಬಲಿಪಶು ಮಾಡಿ ದೊಡ್ಡ ತಲೆಗಳನ್ನು ರಕ್ಷಿಸಲಾಗುತ್ತಿದೆ. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುವವರೆಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಜುಲೈ 3 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಗೂ ನಾನು ಕಾರ್ಯಕರ್ತರೊಂದಿಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದೇವೆ. ಬುಧವಾರ ಬೆಳಗ್ಗೆ 9.30ಕ್ಕೆ ಕುಮಾರಕೃಪಾ ಅತಿಥಿ ಗೃಹದಿಂದ ಮೆರವಣಿಗೆಯಲ್ಲಿ ಹೊರಟು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಆರ್. ಅಶೋಕ್ ತಿಳಿಸಿದ್ದಾರೆ.