ರಸ್ತೆ ಪಕ್ಕ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ದಾವಣಗೆರೆ ಕಡೆಗೆ ಹೊರಟಿದ್ದ ಟಿಟಿ ವಾಹನದಲ್ಲಿ ಒಟ್ಟು 12 ಜನ ಪ್ರಯಾಣಿಸುತ್ತಿದ್ದರು. ಈ ವೇಳೆ ರಸ್ತೆ ಪಕ್ಕ ಕೆಟ್ಟು ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇದರಿಂದ ಚಾಲಕ ಮತ್ತು ಚಾಲಕನ ಪಕ್ಕ ಕುಳಿತಿದ್ದ ಮತ್ತೊಬ್ಬ ಪ್ರಯಾಣಿಕ ಟಿಟಿ ವಾಹನ ನಲ್ಲಿ ಸಿಲುಕಿ ಒದ್ದಾಡುವಂತಾಯಿತು. ಅವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅಲ್ಲಿದ್ದ ಸ್ಥಳೀಯರು ಮತ್ತು ಇತರ ಲಾರಿ ಚಾಲಕರು ಹರಸಾಹಸಪಟ್ಟು ಆ ಇಬ್ಬರನ್ನೂ ಹೊರತೆಗೆಯುವ ಕೆಲಸ ಮಾಡಿದರು.
ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ನಿನ್ನೆ ರಾತ್ರಿಯೇ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.