ಬೆಂಗಳೂರು : ಹಾಸನದಲ್ಲಿ ಗುರುವಾರ ನಡೆಯಲಿರುವುದು ಸ್ವಾಭಿಮಾನ ಸಮಾವೇಶ ಅಲ್ಲ, ಅದು ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲು ಮಾಡುತ್ತಿರುವ ಸಮಾವೇಶ, ಇದು ಕೇವಲ ಹಾಸನದಲ್ಲಿ ಅಷ್ಟೇ ಅಲ್ಲ, ಇಡೀ ಕರ್ನಾಟಕದಲ್ಲಿ ಇಂಥ ಸಮಾವೇಶಗಳನ್ನು ಆಯೋಜಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇದು ಪಕ್ಷ, ಅಹಿಂದ ಸಮಾವೇಶ ಅಲ್ಲ, ಮುಖ್ಯಮಂತ್ರಿಗಳು ಕಾಂಗ್ರೆಸ್ ಪಕ್ಷದವರಾಗಿದ್ದು, ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದಾರೆ ಎಂದು ಹೇಳಿದರು.
ಬಿಜೆಪಿ ಆರೋಪ ನಿರಾಧಾರ
ಗ್ಯಾರಂಟಿ ಯೋಜನೆಗಳಿಗೆ ಹಣ ಪೂರೈಸಲು ಸಾರಿಗೆ ನಿಗಮಗಳ ಆಸ್ತಿ ಮಾರಾಟ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಬಿಬಿಎಂಪಿಯನ್ನೇ ಅಡ ಇಟ್ಟಿದ್ದರು. ವಿಧಾನಸೌಧ ಒಂದನ್ನ ಬಿಟ್ಟು ಬಹುತೇಕ ಆಸ್ತಿಪಾಸ್ತಿಗಳನ್ನು ಅಡವಿಟ್ಟಿದ್ದರು ಎಂದು ತಿರುಗೇಟು ನೀಡಿದರು.
ಸಿದ್ದರಾಮಯ್ಯ ಅವರು ಆರ್ಥಿಕ ತಜ್ಙ ಅಂತಾನೆ ಹೆಸರುಗಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ 58 ಸಾವಿರ ಕೋಟಿ ಮೀಸಲಿಟ್ಟಿದ್ದರೂ ಯಾವುದೇ ಸಾಲ ಹೊರೆ ಹೊರಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ತುಂಬಾ ಚೆನ್ನಾಗಿ ನಡೆಯುತ್ತಿದೆ ಎಂದು ಸಚಿವರು ಹೇಳಿದರು.
ಹೈಕಮಾಂಡ್ ತೀರ್ಮಾನವೇ ಅಂತಿಮ
ಅಧಿಕಾರ ಹಂಚಿಕೆ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಅಧಿಕಾರ ಹಂಚಿಕೆ ಕುರಿತಂತೆ ಅವರನ್ನೇ ಕೇಳಿದರೆ ಒಳಿತು. ನಾನು ಪಕ್ಷದ ಶಿಸ್ತಿನ ಸಿಪಾಯಿ. ನಾವೆಲ್ಲರೂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ನನಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜವಾಬ್ದಾರಿಯನ್ನು ವಹಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆಯನ್ನು ಮನೆ ಮನೆಗೆ ತಲುಪಿಸುವುದೇ ನನ್ನ ಜವಾಬ್ದಾರಿ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನನಗೆ ಗೊತ್ತಿಲ್ಲ ಎಂದರು.
ಅನುದಾನ ಕಡಿತವಿಲ್ಲ
ವಿಕಲ ಚೇತನ ಇಲಾಖೆಗೆ 46 ಕೋಟಿ ಅನುದಾನ ಕಡಿತ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ಇಲಾಖೆಗೆ ವಿಕಲಚೇತನರಿಂದ ಸಾಕಷ್ಟು ಅರ್ಜಿಗಳು ಬರುತ್ತವೆ. ವೀಲ್ ಚೇರ್, ಸ್ಕೂಟರ್, ಲ್ಯಾಪ್ ಟಾಪ್ , ಬ್ರೈಲ್ ಕಿಟ್ ಕೊಡಬೇಕು. ಹೀಗೆ ಸಾಕಷ್ಟು ಅರ್ಜಿಗಳು ಬಂದಾಗ ಇದಕ್ಕೆಲ್ಲಾ ಹಣಕಾಸು ಬೇಕಾಗಿದೆ. ಇದಕ್ಕೆ ಈಗಾಗಲೇ 14 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಉಳಿದ ಹಣ ಶೀಘ್ರವೇ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ಕೊಟ್ಟಿದ್ದಾರೆ ಎಂದು ಸಚಿವರು ಸ್ಪಷ್ಟಪಡಿಸಿದರು.