ಕಿತ್ತೂರು ತಹಶೀಲ್ದಾರರ ಕಾರ್ಯಾಲಯದ ಕಂದಾಯ ಮತ್ತು ಆಹಾರ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಏಜೆಂಟರರ ಹಾವಳಿ ಮತ್ತು ಅಧಿಕಾರಿಗಳ ಕಾರ್ಯವೈಖರಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ ಅವರು ಎಚ್ಚರಿಕೆಯನ್ನು ನೀಡಿದ್ದಾರೆ.

ಇಂದು ಕಿತ್ತೂರಿನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಅವರು ಮಾತನಾಡಿದರು. ಕಿತ್ತೂರು ತಹಶೀಲ್ದಾರ ಕಾರ್ಯಾಲಯದ ಆಹಾರ ಮತ್ತು ಕಂದಾಯ ಇಲಾಖೆಯಲ್ಲಿ ಅಧಿಕಾರಿಗಳು ಜನರ ಸಂಪರ್ಕಕ್ಕೆ ಸಿಗುವುದಿಲ್ಲ. ಏಜೆಂಟರರ ಹಾವಳಿಯಿಂದಾಗಿ ಜನರಿಗೆ ಸರಾಗವಾಗಿ ಸೇವೆಗಳು ಸಿಗದೇ ತೊಂದರೆಯುಂಟಾಗುತ್ತಿದೆ. ಅಲ್ಲದೇ ಸರ್ಕಾರಿ ಅಧಿಕಾರಿಗಳ ಸೇವೆಯನ್ನು ಖಾಸಗಿ ವ್ಯಕ್ತಿಗಳು ನಿರ್ವಹಿಸುತ್ತಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ, ತಪ್ಪು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ಆಧಾರಕಾರ್ಡ್ ಮಾಡಿಸಿಕೊಳ್ಳಲು ಬರುವ ಜನಸಾಮಾನ್ಯರಿಂದ ಹೆಚ್ಚುವರಿ ಹಣ ಪಡೆಯುತ್ತಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ಜನರಿಗೆ ತೊಂದರೆಯಾದರೇ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದರು. ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ ಸೂಚನೆ ಕೈಗೊಳ್ಳಲಾಗಿದೆ. ತಹಶೀಲ್ದಾರರು ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಅವರು ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಇನ್ನು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಳಪೆ ಮಟ್ಟದ ಪೌಷ್ಠಿಕ ಆಹಾರ ಪೂರೈಕೆಯಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ಗುಣಮಟ್ಟವನ್ನು ಪರಿಶೀಲಿಸಲು ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆಯನ್ನು ನೀಡಿದ್ದಾರೆ ಎಂದರು.