Banglore

ನಿಧಾನಗತಿಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಶೀಘ್ರಗತಿ ನೀಡಲು ಕ್ರಮ; ಸದನದಲ್ಲಿ ಸಚಿವ ಸತೀಶ ಜಾರಕಿಹೊಳಿ

Share

ರಾಜ್ಯದಲ್ಲಿ ಆಮೆಗತಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗೆ ಶೀಘ್ರಗತಿಯನ್ನು ನೀಡುವಂತೆ ಪರಿಷತ್ ಸದಸ್ಯರು ಇಂದು ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಈ ಕುರಿತು ಸಭೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದರು.

ವಿಧಾನ ಪರಿಷತ್ತಿನಲ್ಲಿಂದು ಸದಸ್ಯರಾದ ಎಸ್. ರವಿಕುಮಾರ ಅವರು ರಾಜ್ಯಾದ್ಯಂತ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಧಾನ ಗತಿಯಲ್ಲಿ ನಡೆಯಲು ಕಾರಣವೇನು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಚುಕ್ಕೆ ಗುರುತಿನ ಪ್ರಶ್ನೆಯನ್ನು ಕೇಳಿದರು. ಅಲ್ಲದೇ, ನಿಧಾನಗತಿಯ ಕಾಮಗಾರಿಯಿಂದ ಜನರಿಗೆ ಆಗುತ್ತಿರುವ ತೊಂದರೆಗಳನ್ನು ನೀಗಿಸಲು 10 ಬಾರಿ ಸಭೆ ನಡೆಸಿರುವ ಸಚಿವರ ಕಾರ್ಯವನ್ನು ಶ್ಲಾಘಿಸಿ, ಕಾಮಗಾರಿಗಳಿಗೆ ಶೀಘ್ರಗತಿ ನೀಡಲು ಕ್ರಮಕೈಗೊಳ್ಳಬೇಕು. ಅಲ್ಲದೇ ಟೋಲ್ ಸಿಬ್ಬಂದಿಯ ದುರ್ವತನೆಯ ವಿರುದ್ಧ ಕ್ರಮಕೈಗೊಳ್ಳಬೇಕು. ಟ್ರಾಮಾ ಸೇಂಟರ್’ಗಳನ್ನು ನಿರ್ಮಿಸಬೇಕೆಂದು ಆಗ್ರಹಿಸಿದರು.  ಇದಕ್ಕೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಸಕಾರಾತ್ಮಕ ಪ್ರತಿಕ್ರಿಯೆನ್ನು ನೀಡಿ, ಈಗಾಗಲೇ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದೆ. ಕಾಮಗಾರಿಗೆ ಶೀಘ್ರಗತಿಯನ್ನು ನೀಡಲು ಕ್ರಮಕೈಗೊಳ್ಳಲಾಗುವುದು ಎಂದರು.

ಇನ್ನು ಪರಿಷತ್ ಸದಸ್ಯರಾದ ಕಿಶೋರ ಕುಮಾರ್ ಪುತ್ತೂರ ಅವರು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯನ್ನು ವಿಳಂಬ ಮಾಡದೇ, ಶೀಘ್ರದಲ್ಲೇ ಪೂರ್ಣಗೊಳಿಸಿ ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂದರು. ಮೀನು, ತರಕಾರಿ ವ್ಯಾಪಾರ ಮಂಗಳೂರಿನಲ್ಲಿ ಹೆಚ್ಚಾಗಿದೆ. ಆದರೇ, ರಸ್ತೆಯ ಕಾಮಗಾರಿ ಹಿನ್ನೆಲೆ ವ್ಯಾಪಾರದ ಮೇಲೆ ಪರಿಣಾಮ ಬೀರಿದೆ ಎಂದರು. ರಾಜ್ಯದ ಸಚಿವರು ಮತ್ತು ಕೇಂದ್ರ ಸಚಿವರು ಕೂಡಲೇ ಕ್ರಮಕೈಗೊಳ್ಳಬೇಕೆಂದರು.

ಇದಕ್ಕೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಕೆಲ ಅಡಚಣೆಗಳಿದ್ದು, ಅವುಗಳನ್ನು ನೀಗಿಸಲು ಪ್ರಯತ್ನಿಸಲಾಗುವುದು. ಮುಂದಿನ ತಿಂಗಳು ಕೇಂದ್ರದ ಸಭೆ ನಡೆಯಲಿದ್ದು, ಅಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ಪರಿಹಾರ ಕಂಡುಕೊಳ್ಳುವುದಾಗಿ ತಿಳಿಸಿದರು

Tags:

error: Content is protected !!