ಸರ್ಕಾರಿ ಯೋಜನೆಗಳ ಕಾಮಗಾರಿಯಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ರಷ್ಟು ಮೀಸಲಾತಿ ನೀಡಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೇ ಅಲ್ಪಸಂಖ್ಯಾತರ ಹಿತದಲ್ಲಿಯೇ ನಿರ್ಣಯವನ್ನ ಕೈಗೊಂಡಿದ್ದು, ಅಲ್ಪ ಸಂಖ್ಯಾತರಿಗೆ ಮೀಸಲಾತಿ ಹೆಚ್ಚಳಕ್ಕೆ ತಿರ್ಮಾನಿಸಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವಸತಿ ಯೋಜನೆಯಲ್ಲಿ ಅಲ್ಪ ಸಂಖ್ಯಾತರಿಗೆ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಸಚಿವ ಸಂಪುಟ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಕಾನೂನು ಸಚಿವ ಹೆಚ್ ಕೆ ಪಾಟೀಲ್, ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ಯೋಜನೆ ಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಳ ಮಾಡಲಾಗಿದ್ದು, ಶೇಕಡಾ 10ರಿಂದ ಶೇ.15ಕ್ಕೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ಸ್ಪಷ್ಟಪಡಿಸಿದರು. ಅಲ್ಪಸಂಖ್ಯಾತ ಸಮುದಾಯಗಳಿಗೆ ಮೀಸಲಾತಿಯನ್ನು ಪ್ರಸ್ತುತ ಶೇ.10 ರಿಂದ ಶೇ.15 ಕ್ಕೆ ಹೆಚ್ಚಿಸುವ ಪ್ರಸ್ತಾವನೆಯನ್ನು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಿಎಂ ಸಿದ್ದರಾಮಯ್ಯನವರ ಮುಂದೆ ಇಟ್ಟಿದ್ದರು. ಇದೀಗ ಈ ಪ್ರಸ್ತಾವನೆಯನ್ನು ಇಂದಿನ ಕರ್ನಾಟಕ ಸಚಿವ ಸಂಪುಟ ಅಂಗೀಕರಿಸಿದೆ.
ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಜಾರಿಗೊಳಿಸುವ ಎಲ್ಲಾ ವಸತಿ ಯೋಜನೆಗಳಿಗೆ ಅನ್ವಯಿಸುತ್ತದೆ. ರಾಜ್ಯದಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಯಲ್ಲಿ ಮೀಸಲಾತಿ ಸೌಲಭ್ಯ ಸಿಗಲಿದೆ.ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಯಡಿ ನಿಗದಿಪಡಿಸುವ ಗುರಿಯಲ್ಲಿ ಅಲ್ಪಸಂಖ್ಯಾತರಿಗೆ 10% ಮೀಸಲಾತಿ ನಿಗದಿಯಾಗಿದೆ. ಈ ಮೀಸಲಾತಿಯನ್ನು ಇದೀಗ 15% ಏರಿಕೆ ಮಾಡಿ ಕ್ಯಾಬಿನೆಟ್ ಅನುಮೋದನೆ ಸಹ ನೀಡಿದೆ.
ಮುಂದುವರೆದು ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್ ಅವರು ಸಾಚಾರ್ ಕಮಿಟಿ ವರದಿಯನ್ನೂ ಕೂಡ ಈಗ ಕೇಂದ್ರ ಪರಿಗಣಿಸುತ್ತಿದೆ. ಕೇಂದ್ರದ ಸೂಚನೆಗಳನ್ನು ಗಮನಿಸಿ ಸಾಮಾಜಿಕ ನ್ಯಾಯದ ಪಾಲನೆ ಮಾಡುತ್ತಿದ್ದೇವೆ. ನಿಯಮಗಳಿಗೆ ಕ್ಯಾಬಿನೆಟ್ ಅನುಮೋದನೆ ಸಾಕು. ಮುಸ್ಲಿಂ, ಜೈನರು, ಕ್ರಿಶ್ಚಿಯನ್ ಎಲ್ಲರೂ ಕೂಡ ಇದರಲ್ಲಿ ಒಳಗೊಳ್ಳುತ್ತಾರೆ. ಇದಕ್ಕೆ ಬೇಕಾದ ಹಲವು ಅಧ್ಯಯನ ವರದಿಗಳೂ ಕೂಡ ಇವೆ. ಬಡವರಿಗೆ ಮನೆ ಮಾಡಿಕೊಡುವುದರಲ್ಲಿ ರಾಜಕೀಯ ವಾಸನೆ ಹುಡುಕುವವರಿಗೆ ನಾವು ಉತ್ತರ ಕೊಡಲ್ಲ. ವಸತಿ ಹೀನರಿಗೆ ಹೆಚ್ಚಿನ ಸೌಲಭ್ಯಗಳನ್ನು ಕೊಡಬೇಕು ಎಂಬುದು ಸರ್ಕಾರದ ಉದ್ದೇಶ ಎಂದು ಎಂದು ಹೇಳಿದರು.