Banglore

ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ನಿತಿನ್ ಗಡ್ಕರಿ

Share

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನಿರ್ಮಾಣ ಮಾಡಲಾಗಿರುವ ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ಲೋಕಾರ್ಪಣೆಗೊಳಿಸಿದರು. ಬಳಿಕ, ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ ನಿತಿನ್ ಗಡ್ಕರಿ, ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಎಂದು ನಾಮಕರಣ ಮಾಡಲಾಗಿದೆ ಎಂದು ಘೋಷಿಸಿದರು.

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ನೆಹರು ಮೈದಾನದಲ್ಲಿ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಸಚಿವ ನಿತಿನ್ ಗಡ್ಕರಿ ಮಾತನಾಡಿದರು. ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ನಿರ್ಮಾಣಕ್ಕೆ ನಾನೇ ಭೂಮಿಪೂಜೆ ಮಾಡಿದ್ದೆ. ಇದೀಗ, ನಾನೇ ಉದ್ಘಾಟನೆ ಮಾಡಿದ್ದು ನನ್ನ ಸೌಭಾಗ್ಯ ಎಂದು ಹೇಳಿದರು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನೂತನ ಹೆದ್ದಾರಿ ನಿರ್ಮಾಣ ಮಾಡಿದ್ದೇವೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಶಿವಮೊಗ್ಗ-ತುಮಕೂರು ಹೆದ್ದಾರಿ ಕಾಮಗಾರಿ ನಡೆಯುತ್ತಿದೆ.

ಹುಬ್ಬಳ್ಳಿ-ಧಾರವಾಡ ಹೆದ್ದಾರಿ ಕಾಮಗಾರಿ ಶೀಘ್ರದಲ್ಲೇ ಪೂರ್ಣ ಆಗಲಿದೆ ಎಂದು ತಿಳಿಸಿದರು. 5000 ಕೋಟಿ ರೂ. ವೆಚ್ಚದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಗುರಿ ಹೊಂದಿದ್ದೇವೆ. 1300 ಸಾವಿರ ಕೋಟಿ ರೂ. ವೆಚ್ಚದಲ್ಲಿ ಹಾಸನದಿಂದ ರಾಯಚೂರಿಗೆ ಸಂಪರ್ಕ ಕಲ್ಪಿಸುವ ನಾಲ್ಕು ಲೈನ್ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಇದರಿಂದ ಪ್ರಯಾಣದ ಸಮಯ ಅರ್ಧದಷ್ಟು ಕಡಿಮೆಯಾಗಲಿದೆ. ಬೆಂಗಳೂರು-ಚೆನೈ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ ಎಂದರು.

ಇನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರು ಸಣ್ಣ ರಸ್ತೆಯಿದ್ದ ಸ್ಥಳದಲ್ಲಿ 473 ಕೋಟಿಯ ಮೊತ್ತದಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನೇ ನಿರ್ಮಿಸಿ ದಾಖಲೆಯನ್ನು ಬರೆದಿದ್ದಾರೆ. ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡಿದ್ದ ರಸ್ತೆಯನ್ನು ಈಗ ಅಭಿವೃದ್ಧಿಗೊಳಿಸಿದ್ದು, ಜನರಿಗೆ ಅನುಕೂಲವಾಗಿದೆ ಎಂದರು.

ಇನ್ನು ಮಾಜಿ ಸಿಎಂ ಯಡಿಯೂರಪ್ಪನವರು ಕೂಡ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ನಮ್ಮದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಸರ್ಕಾರ. ಅಧಿಕಾರದಲ್ಲಿ ಇರಲಿ ಬಿಡಲಿ ಜನಸೇವೆಯೇ ನಮ್ಮ ಮೂಲ ಗುರಿ, ನಮ್ಮ ಕರ್ತವ್ಯ ಎಂದರು.  ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ಜೋಷಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸಂಸದ ಬಿ.ವೈ. ರಾಘವೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್‌, ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಎನ್‌.ಕೆ. ಜಗದೀಶ್, ಪ್ರಮುಖರಾದ ಹರತಾಳು ಹಾಲಪ್ಪ, ಟಿ.ಡಿ. ಮೇಘರಾಜ್, ಪ್ರಸನ್ನ ಕೆರೆಕೈ, ಎಸ್. ದತ್ತಾತ್ರಿ, ಹರಿಕೃಷ್ಣ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.

Tags:

error: Content is protected !!