ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

ಬೆಳಗಾವಿಯಿಂದ ಬೈಲಹೊಂಗಲ ಕಡೆಗೆ ಹೋಗುತ್ತಿದ್ದ ವೇಳೆ ಚಿಕ್ಕಬಾಗೇವಾಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಡಿಜೈರ್ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರ ಪೈಕಿ ಅಥೀಕ (24) ಎಂಬ ಯುವಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾನೆ. ಮತ್ತೊಬ್ಬ ಪ್ರಯಾಣಿಕನ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಆತನನ್ನು ಕೂಡಲೇ ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೀಡಾದ ಕಾರಿನಲ್ಲಿ ಒಟ್ಟು ನಾಲ್ಕು ಜನರು ಪ್ರಯಾಣಿಸುತ್ತಿದ್ದು, ಇವರೆಲ್ಲರೂ ಬೈಲಹೊಂಗಲ ಪಟ್ಟಣದವರು ಎಂದು ತಿಳಿದುಬಂದಿದೆ. ಅಪಘಾತ ಸಂಭವಿಸುತ್ತಿದ್ದಂತೆ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಿಂದ ಜಿಗಿದು ಪರಾರಿಯಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ. ಘಟನಾ ಸ್ಥಳಕ್ಕೆ ಬೈಲಹೊಂಗಲ ಸಿಪಿಐ ಪ್ರಮೋದ ಎಲಿಗಾರ, ಎಎಸ್ಐ ಮಲ್ಲನ್ನವರ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯು ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
