ಬಾಗಲಕೋಟೆಯ ಬುದ್ಧಿಮಾಂದ್ಯ ವಿಶೇಷ ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಕ್ಕಳ ಯೋಗಕ್ಷೇಮ ವಿಚಾರಿಸಿದ ಸಚಿವರು, ಘಟನೆಯ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದರು.


ವಿಶೇಷ ಚೇತನ ಮಕ್ಕಳ ಮೇಲಿನ ಹಲ್ಲೆ ಸುದ್ದಿ ತಿಳಿಯುತ್ತಿದ್ದಂತೆ ಎಚ್ಚೆತ್ತ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಜಿಲ್ಲಾಧಿಕಾರಿ ಜಿ. ಜನಾರ್ದನ್ ಅವರೊಂದಿಗೆ ಶಾಲೆಗೆ ಭೇಟಿ ನೀಡಿದರು. ಮಕ್ಕಳ ಬಳಿ ತೆರಳಿ ಅವರ ಹೆಸರು ಮತ್ತು ಇತರೆ ವಿವರಗಳನ್ನು ಪ್ರೀತಿಯಿಂದ ವಿಚಾರಿಸಿದ ಸಚಿವರು, “ಯಾರೂ ಹೆದರಬೇಡಿ, ಆರಾಮಾಗಿರಿ, ನಾವು ನಿಮ್ಮ ಜೊತೆಗಿದ್ದೇವೆ” ಎಂದು ಧೈರ್ಯ ತುಂಬಿದರು. ಸರಿಯಾಗಿ ಊಟ ಮಾಡಿ ಆರೋಗ್ಯ ಕಾಪಾಡಿಕೊಳ್ಳುವಂತೆ ಮಕ್ಕಳಿಗೆ ಕಿವಿಮಾತು ಹೇಳಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿಯೊಂದಿಗೆ ಚರ್ಚಿಸಿದ ಸಚಿವರು, ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಇಂತಹ ಘಟನೆಗಳು ಮರುಕಳಿಸದಂತೆ ಜಾಗ್ರತೆ ವಹಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
