ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ಕೌಟುಂಬಿಕ ಕಲಹವೊಂದು ದುರಂತ ಅಂತ್ಯ ಕಂಡಿದೆ. ಜಗಳದಿಂದ ಮನನೊಂದ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರೆ, ಅತ್ತ ಪತ್ನಿಯ ಸಾವಿನ ಬೆನ್ನಲ್ಲೇ ಪತಿ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದ ಉಮಾಶ್ರೀ ಹೆಗ್ಗಣ್ಣವರ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಪತ್ನಿ. ಇತ್ತ ಪತ್ನಿಯ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದ ಪತಿ ಲಗಮಣ್ಣ ಹೆಗ್ಗನ್ನವರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಂದಹಾಗೆ, ಉಮಾಶ್ರೀ ಹಾಗೂ ಲಗಮಣ್ಣ ಪ್ರೀತಿಸಿ ವಿವಾಹವಾಗಿದ್ದರು. ಕೇವಲ ಒಂದೂವರೆ ವರ್ಷದ ಹಿಂದಷ್ಟೇ ಇವರ ಮದುವೆಯಾಗಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ದಂಪತಿ ನಡುವೆ ಮನೆಯಲ್ಲಿ ಸಣ್ಣಪುಟ್ಟ ವಿಚಾರಕ್ಕೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ಕೌಟುಂಬಿಕ ಕಲಹಕ್ಕೆ ಬೇಸತ್ತ ಉಮಾಶ್ರೀ ನೇಣಿಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಚಿಕ್ಕೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
