Delhi

ದೆಹಲಿಯಲ್ಲಿಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

Share

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ದೆಹಲಿಯ ಇಂದಿರಾ ಭವನದಲ್ಲಿ ಇಂದು ಮಹತ್ವದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಆರಂಭವಾಗಿದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ ಬದಲಿಸುವ ಅಥವಾ ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳುವ ಕುರಿತು ಮತ್ತು ರಾಜ್ಯ ಸಚಿವ ಸಂಪುಟ ಪುನಾರಚನೆ ಅಥವಾ ನಾಯಕತ್ವದ ಕುರಿತು ಹೆಚ್ಚಿನ ಸ್ಪಷ್ಟನೆ ಹೊರಬೀಳುವ ಸಾಧ್ಯತೆಯಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ದೆಹಲಿಯ ಇಂದಿರಾ ಭವನದಲ್ಲಿ ಇಂದು ಮಹತ್ವದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಆರಂಭವಾಗಿದೆ. ಈ ಸಭೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ದೇಶದ ಹಲವು ಹಿರಿಯ ನಾಯಕರು ಪಾಲ್ಗೊಂಡಿದ್ದಾರೆ.


ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ ಬದಲಿಸುವ ಅಥವಾ ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳುವ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ. ಮುಂಬರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಸಿದ್ಧತೆ ಮತ್ತು ಕಾರ್ಯತಂತ್ರ ರೂಪಿಸುವುದು ಸಭೆಯ ಪ್ರಮುಖ ಉದ್ದೇಶವಾಗಿದೆ. ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿರುವ ‘ಮುಖ್ಯಮಂತ್ರಿ ಬದಲಾವಣೆ’ ಅಥವಾ ‘ಅಧಿಕಾರ ಹಂಚಿಕೆ’ ಕುರಿತ ಗೊಂದಲಗಳು ಈ ಸಭೆಯಲ್ಲಿ ಚರ್ಚೆಗೆ ಬರುವ ನಿರೀಕ್ಷೆಯಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ದೆಹಲಿಗೆ ತೆರಳಿ ಸಭೆಯಲ್ಲಿ ಭಾಗವಹಿಸಿದ್ದಾರೆ. ಆದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನ ಇಲ್ಲದ ಕಾರಣ ಅವರು ದೆಹಲಿಗೆ ತೆರಳಿಲ್ಲ. “ಡಿಸಿಎಂ ಅನುಪಸ್ಥಿತಿಯಲ್ಲಿ ಹೈಕಮಾಂಡ್ ಅಧಿಕಾರ ಹಂಚಿಕೆಯಂತಹ ಗಂಭೀರ ವಿಷಯಗಳನ್ನು ಇಂದೇ ಇತ್ಯರ್ಥಪಡಿಸುವುದು ಕಷ್ಟ” ಎಂಬ ಮಾತುಗಳು ಕೇಳಿಬರುತ್ತಿವೆ. ಆದಾಗ್ಯೂ, ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ಹೊರಡುವ ಮುನ್ನ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿರುವುದು ಮತ್ತು “ಗೊಂದಲಗಳನ್ನು ಬಗೆಹರಿಸುತ್ತೇವೆ” ಎಂದು ಭರವಸೆ ನೀಡಿರುವುದು ರಾಜ್ಯ ಕಾಂಗ್ರೆಸ್ ವಲಯದಲ್ಲಿ ಹೊಸ ಆಶಾಭಾವನೆ ಮೂಡಿಸಿದೆ. ಸಭೆಯ ನಂತರ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಲಿದ್ದು, ರಾಜ್ಯ ಸಚಿವ ಸಂಪುಟ ಪುನಾರಚನೆ ಅಥವಾ ನಾಯಕತ್ವದ ಕುರಿತು ಹೆಚ್ಚಿನ ಸ್ಪಷ್ಟನೆ ಹೊರಬೀಳುವ ಸಾಧ್ಯತೆಯಿದೆ.

Tags:

error: Content is protected !!