ಬೆಳಗಾವಿ ಅಧಿವೇಶನದ ಹಿನ್ನೆಲೆಯಲ್ಲಿ ನಗರದ ರಾಣಿ ಚನ್ನಮ್ಮ ವೃತ್ತದ ಸಂಚಾರ ದಟ್ಟಣೆಯ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪಾಲಿಕೆ ಆಯುಕ್ತ ಕಾರ್ತಿಕ್ ನೇತೃತ್ವದಲ್ಲಿ ಗುರುವಾರ ಚನ್ನಮ್ಮ ವೃತ್ತದಲ್ಲಿ ಪರಿಶೀಲನೆ ನಡೆಸಿದರು.
ಬೆಳಗಾವಿ ನಗರದ ಹೃದಯ ಭಾಗವಾಗಿರುವ ರಾಣಿ ಚನ್ನಮ್ಮ ವೃತ್ತದಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚಾರ ನಡೆಸುತ್ತವೆ. ಅಧಿವೇಶನದ ವೇಳೆ ಜನರಿಗೆ ಹಾಗೂ ಶಾಸಕ, ಸಚಿವರು ಮತ್ತು ಅಧಿಕಾರಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪಾಲಿಕೆಯಿಂದ ಪೂರ್ವ ಸಿದ್ಧತೆ ಮಾಡಿರುವುದನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪಾಲಿಕೆ ಆಯುಕ್ತ ಕಾರ್ತಿಕ್, ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆಯನ್ನು ನಿಷೇಧಿಸುವ ಕುರಿತು ಜಿಲ್ಲಾಡಳಿತ ಹಾಗೂ ನಗರ ಪೊಲೀಸ್ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು. ಚನ್ನಮ್ಮ ವೃತ್ತ ಅಗಲವಾಗಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್, ಪಾಲಿಕೆಯ ಉಪ ಆಯುಕ್ತೆ ಲಕ್ಷ್ಮೀ ನಿಪ್ಪಾಣಿಕರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

