Bagalkote

ಬಾಗಲಕೋಟೆ: ಮುಧೋಳ ಬಳಿ ಭೀಕರ ರಸ್ತೆ ಅಪಘಾತ; ಮುಖಾಮುಖಿ ಲಾರಿ ಡಿಕ್ಕಿಗೆ ಮೂವರ ದುರ್ಮರಣ

Share

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬಂಟನೂರು ಕ್ರಾಸ್ ಬಳಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ

ಸಿಮೆಂಟ್ ತುಂಬಿಕೊಂಡು ಬರುತ್ತಿದ್ದ ಬಲ್ಕರ್ ಗಾಡಿ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ವಾಹನಗಳೊಳಗೆ ನಾಲ್ವರು ಸಿಲುಕಿಕೊಂಡಿದ್ದರು. ಸ್ಥಳೀಯರು ಮತ್ತು ಪೊಲೀಸರ ಸಹಕಾರದೊಂದಿಗೆ ತಕ್ಷಣವೇ ರಕ್ಷಣಾ ಕಾರ್ಯ ಆರಂಭಿಸಿದರು ಆದರೆ, ದುರದೃಷ್ಟವಶಾತ್ ಸಿಲುಕಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದರು. ಮತ್ತೋರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ನಂತರ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಿಷಯ ತಿಳಿಯುತ್ತಿದ್ದಂತೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಜೆಸಿಬಿ ಯಂತ್ರಗಳ ಸಹಾಯದಿಂದ ವಾಹನಗಳ ಅವಶೇಷಗಳನ್ನು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಮೃತದೇಹಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಘಟನೆ ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:

error: Content is protected !!