ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗಣೇಶಪುರದಲ್ಲಿ ಹಮ್ಮಿಕೊಂಡಿದ್ದ ಜನತಾ ದರ್ಬಾರ್‌ನಲ್ಲಿ ಸ್ಥಳೀಯ ನಾಗರಿಕರ ಅಹವಾಲುಗಳನ್ನು ಆಲಿಸಿದರು.


ದಲಿತ ಮುಖಂಡ ಮಲ್ಲೇಶ ಚೌಗುಲೆ ಅವರ ನಿವಾಸದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗಣೇಶಪುರ ಹಾಗೂ ಸುತ್ತಮುತ್ತಲಿನ ನೂರಾರು ನಾಗರಿಕರು ಪಾಲ್ಗೊಂಡು ಕುಡಿಯುವ ನೀರು, ರಸ್ತೆ, ವಿದ್ಯುತ್, ವಸತಿ ಯೋಜನೆ ಮತ್ತು ಮಹಿಳಾ ಕಲ್ಯಾಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಪ್ರತಿಯೊಂದು ದೂರನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲೇ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, “ಸಾಮಾನ್ಯ ಜನರ ಸಮಸ್ಯೆಗಳನ್ನು ನೇರವಾಗಿ ಅರ್ಥಮಾಡಿಕೊಳ್ಳಲು ಜನತಾ ದರ್ಬಾರ್ ಒಂದು ಉತ್ತಮ ವೇದಿಕೆಯಾಗಿದೆ. ಗಣೇಶಪುರ ಭಾಗದ ಬಾಕಿ ಇರುವ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ಆದ್ಯತೆಯ ಮೇಲೆ ಪೂರೈಸಲಾಗುವುದು” ಎಂದು ಭರವಸೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಕಾಡಾ ಅಧ್ಯಕ್ಷ ಯುವರಾಜ ಕದಂ, ಅಡವೇಶ ಇಟಗಿಮಠ, ಮಹೇಶ್ ಕೋಲ್ಕರ್ ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು. ತಮ್ಮ ಸಮಸ್ಯೆಗಳನ್ನು ನೇರವಾಗಿ ಸಚಿವರಿಗೆ ತಿಳಿಸಲು ಅವಕಾಶ ಸಿಕ್ಕಿದ್ದಕ್ಕಾಗಿ ಸ್ಥಳೀಯ ನಿವಾಸಿಗಳು ಸಂತಸ ವ್ಯಕ್ತಪಡಿಸಿದರು
