ಮೈಸೂರಿನಲ್ಲಿ ಆಯೋಜಿಸಲಾಗಿರುವ ವಿಶ್ವ ರೈತ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ರೈತರ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕ್ಕೊಪ್ಪ ಗ್ರಾಮದ ಬಳಿ ಸಂಭವಿಸಿದೆ.


ಅಪಘಾತದ ತೀವ್ರತೆಗೆ ವಾಹನದಲ್ಲಿದ್ದ 30ಕ್ಕೂ ಹೆಚ್ಚು ರೈತರು ಗಾಯಗೊಂಡಿದ್ದು, ಈ ಪೈಕಿ 9ಕ್ಕೂ ಹೆಚ್ಚು ಜನರ ಕೈಕಾಲು ಹಾಗೂ ಬೆನ್ನಿಗೆ ಗಂಭೀರ ಸ್ವರೂಪದ ಪೆಟ್ಟಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡವರೆಲ್ಲರೂ ಬೈಲಹೊಂಗಲ ತಾಲೂಕಿನ ಗರಜೂರ ಗ್ರಾಮದ ನಿವಾಸಿಗಳಾಗಿದ್ದು, ಸಮಾವೇಶಕ್ಕೆ ಉತ್ಸಾಹದಿಂದ ಹೊರಟಿದ್ದ ರೈತರಲ್ಲಿ ಈ ಘಟನೆ ಆತಂಕ ಮೂಡಿಸಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ವಾಹನದಿಂದ ಹೊರತೆಗೆದು ಚಿಕಿತ್ಸೆಗೆ ಸಹಕರಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರಿಗೆ ಬೈಲಹೊಂಗಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನ ಅತಿ ವೇಗ ಅಥವಾ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

