ಬಾಗಲಕೋಟೆ ಜಿಲ್ಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೊಯಲ್ ಅವರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ.
ಇಂದಿನಿಂದ ಜನವರಿ 2ರವರೆಗೆ ಜಿಲ್ಲೆಯ ಪ್ರಮುಖ ರಸ್ತೆಗಳಲ್ಲಿ ಚೆಕ್ ಪೋಸ್ಟ್ಗಳನ್ನು ನಿರ್ಮಿಸಲಾಗಿದ್ದು, ರಾತ್ರಿ ಪಾಳಯದ ಗಸ್ತು ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ವಿಶೇಷವಾಗಿ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳಾದ ಬಾದಾಮಿ, ಐಹೊಳೆ ಮತ್ತು ಪಟ್ಟದಕಲ್ಲುಗಳಲ್ಲಿ ಭದ್ರತೆಗಾಗಿ ಹೆಚ್ಚುವರಿ ಹೋಂ ಗಾರ್ಡ್ಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕರು ಕಾನೂನು ಪಾಲನೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳಬೇಕು ಮತ್ತು ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಮನವಿ ಮಾಡಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಸುಮಾರು 800 ಪೊಲೀಸರು, 150 ಡಿಎಆರ್ ಸಿಬ್ಬಂದಿ ಮತ್ತು 400 ಹೋಂ ಗಾರ್ಡ್ಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಡ್ರಂಕ್ ಅಂಡ್ ಡ್ರೈವ್ ಹಾಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಸ್ಥಳದಲ್ಲೇ ದಂಡ ವಿಧಿಸಲು ಸೂಚನೆ ನೀಡಲಾಗಿದ್ದು, ಪ್ರತಿದಿನ ರಾತ್ರಿ 2 ಗಂಟೆಯವರೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಫೀಲ್ಡ್’ನಲ್ಲಿ ಇರಲಿದ್ದಾರೆ.
ಹೊಟೇಲ್ ಮಾಲೀಕರಿಗೆ ಈಗಾಗಲೇ ಮಾರ್ಗಸೂಚಿಗಳನ್ನು ನೀಡಲಾಗಿದ್ದು, ರಾತ್ರಿ 10 ಗಂಟೆಯ ನಂತರ ಡಿಜೆ ಮತ್ತು ಸೌಂಡ್ ಸಿಸ್ಟಂಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾವುದೇ ಔಟ್ ಡೋರ್ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಎಸ್ಪಿ, ಪೊಲೀಸ್ ಇಲಾಖೆಯ ಪೂರ್ವಾನುಮತಿ ಇಲ್ಲದೆ ಕಾರ್ಯಕ್ರಮ ಆಯೋಜಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

