ವಿಜಯಪುರದಲ್ಲಿ ಉದ್ದೇಶಿತ ಸಾರ್ವಜನಿಕ – ಖಾಸಗಿ ಸಹಭಾಗಿತ್ವ (ಪಿಪಿಪಿ)ದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅವಕಾಶ ನೀಡಬಾರದು, ಸರ್ಕಾರವೇ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು’ ಎಂಬ ಬೇಡಿಕೆಯೊಂದಿಗೆ ನಡೆಯುತ್ತಿರುವ ಜನ ಹೋರಾಟ ಶತದಿನ ಕಂಡಿದೆ. ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಆಗ್ರಹಿಸಿ ಕಳೆದ 105 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು, ರಾಜ್ಯ ಸರ್ಕಾರ ಪಿಪಿಪಿ ಮಾದರಿಯ ನಿರ್ಧಾರ ಕೈಬಿಟ್ಟು ಸರ್ಕಾರಿ ಕಾಲೇಜು ನಿರ್ಮಾಣಕ್ಕೆ ಮುಂದಾಗದಿದ್ದರೆ ಜನವರಿ 1ರಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರ ಮನೆಯ ಮುಂದೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

