ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಯಲ್ಲಟ್ಟಿ ಗ್ರಾಮದಲ್ಲಿ ಪಡಿತರ ವಿತರಣೆಯ ಸರ್ವರ್ ಸಮಸ್ಯೆಯಿಂದಾಗಿ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.

ಕಳೆದ ಮೂರು ನಾಲ್ಕು ದಿನಗಳಿಂದ ಇಲ್ಲಿನ ಪಿಕೆಪಿಎಸ್ ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್ ಕೈಕೊಟ್ಟಿದ್ದು, ಸುಮಾರು 980 ಪಡಿತರ ಚೀಟಿದಾರರು ಅಕ್ಕಿ ಹಾಗೂ ಇತರೆ ಸಾಮಗ್ರಿ ಪಡೆಯಲು ಪರದಾಡುವಂತಾಗಿದೆ. ಮುಂಜಾನೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವೃದ್ಧರು, ಮಹಿಳೆಯರು ಹಾಗೂ ಕೂಲಿ ಕಾರ್ಮಿಕರು ಸಾಲುಗಟ್ಟಿ ನಿಂತರೂ ಪ್ರಯೋಜನವಾಗದೆ ಬರಿಗೈಲಿ ಮನೆಗೆ ಮರಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸರ್ವರ್ ಸಮಸ್ಯೆಯಿಂದಾಗಿ ರೈತಾಪಿ ವರ್ಗದವರು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ದಿನವಿಡೀ ನ್ಯಾಯಬೆಲೆ ಅಂಗಡಿ ಮುಂದೆ ಕಾದು ಕುಳಿತು ಹೈರಾಣಾಗಿದ್ದಾರೆ. ಈ ತಾಂತ್ರಿಕ ಸಮಸ್ಯೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸಿ, ಸರ್ವರ್ ದೋಷವನ್ನು ಸರಿಪಡಿಸುವ ಮೂಲಕ ಪಡಿತರ ವಿತರಣೆ ಸುಗಮಗೊಳಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಬಡವರ ಹೊಟ್ಟೆ ತುಂಬಿಸುವ ಯೋಜನೆಯಲ್ಲಿ ಇಂತಹ ವಿಳಂಬ ಧೋರಣೆ ಸರಿಯಲ್ಲ, ಕೂಡಲೇ ಸೂಕ್ತ ಕ್ರಮ ಕೈಗೊಳ್ಳಿ ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.
