Dharwad

ಧಾರವಾಡ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮುಕ್ತ ಮಾಡುವ ನಿಟ್ಟಿನಲ್ಲಿ ನೂರು ದಿನಗಳ ಜಾಗೃತಿ, ಜಿಲ್ಲೆಯ ಪ್ರತಿ ಮನೆಗೂ ಜಾಗೃತಿ ತಲುಪಬೇಕು:ಜಿಲ್ಲಾಧಿಕಾರಿ ದಿವ್ಯ ಪ್ರಭು.

Share

ಭಾರತ ಸರ್ಕಾರವು ಮುಂದಿನ ಹತ್ತು ವರ್ಷಗಳಲ್ಲಿ ಇಡೀ ದೇಶವನ್ನು ಬಾಲ್ಯ ವಿವಾಹ ಮುಕ್ತ ಭಾರತ ಮಾಡಲು ಅಭಿಯಾನ ಹಮ್ಮಿಕೊಳ್ಳಲು ಎಲ್ಲ ರಾಜ್ಯಗಳಿಗೆ, ಜಿಲ್ಲೆಗಳಿಗೆ ಸೂಚಿಸಿದೆ. ಧಾರವಾಡ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಪೂರ್ವದಲ್ಲಿ ಜಿಲ್ಲೆಯ ಎಲ್ಲ ಗ್ರಾಮಗಳನ್ನು ಬಾಲ್ಯ ವಿವಾಹ ಮುಕ್ತ ಗ್ರಾಮಗಳನ್ನಾಗಿ ಘೋಷಿಸಬೇಕು. ಅದಕ್ಕಾಗಿ ಹಮ್ಮಿಕೊಂಡಿರುವ ನೂರು ದಿನಗಳ ಮಕ್ಕಳ ಜಾಗೃತಿ ಕಾರ್ಯಕ್ರಮಗಳು ಜಿಲ್ಲೆಯ ಪ್ರತಿ ಮನೆಗಳಿಗೆ ತಲುಪಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ 1098 ಮತ್ತು 112 ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗ್ರಾಮ ಹಾಗೂ ತಾಲೂಕುಮಟ್ಟದಲ್ಲಿ ವಿವಿಧ ಅಧಿಕಾರಿಗಳನ್ನು ಹೊಂದಿರುವ ಬಾಲ್ಯ ವಿವಾಹ ನಿಯಂತ್ರಣ ಮತ್ತು ನಿಷೇಧ ಸಮಿತಿಗಳನ್ನು ರಚಿಸಿ, ಸಕ್ರಿಯಗೊಳಿಸಲಾಗಿದೆ. ಕಳೆದ ವರ್ಷ ಬಾಲ್ಯ ವಿವಾಹಗಳ ಸಂಖ್ಯೆ ಕಡಿಮೆಯಾಗಿದ್ದು, ಮುಂದಿನ ವರ್ಷಕ್ಕೆ ಅದನ್ನು ಶೂನ್ಯಗೊಳಿಸಲು ಎಲ್ಲ ಅಧಿಕಾರಿಗಳು ಶ್ರಮಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಆಶಯದಂತೆ ರಾಜ್ಯ, ಜಿಲ್ಲೆ, ಗ್ರಾಮಗಳನ್ನು ಬಾಲ್ಯ ವಿವಾಹ ಮುಕ್ತ ಮಾಡುವ ಉದ್ದೇಶವು ಎಲ್ಲರೂ ಒಗ್ಗೂಡಿದಾಗ ಮಾತ್ರ ಹೋಗಲಾಡಿಸಲು ಸಾಧ್ಯ.
ಪ್ರತಿಯೊಂದು ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿ ತಿಂಗಳು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾಡಿ ಮತ್ತು ಸಂಘ ಸಂಸ್ಥೆಗಳನ್ನು ಗುರುತಿಸಿ, ಅವರಿಗೂ ಸಹ ತರಬೇತಿ ನೀಡಿ ಹಾಗೂ ಎಲ್ಲಾ ಅಧಿಕಾರಿ ವರ್ಗದವರಿಗೆ ಸಹ ಇದರ ಬಗ್ಗೆ ತಿಳುವಳಿಕೆ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

ಬಾಲ್ಯ ವಿವಾಹ ಮಾಡುವುದರಿಂದ ಮಕ್ಕಳ ಬಾಲ್ಯವನ್ನು ಕಸಿದುಕೊಂಡಂತಾಗುತ್ತದೆ ಮತ್ತು ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮಗಳು ಬೀರುತ್ತವೆ ಎಂಬುದನ್ನು ಮೊದಲು ಪ್ರತಿಯೊಬ್ಬರು ತಿಳಿಯಬೇಕು. ಬಾಲ್ಯ ವಿವಾಹವನ್ನು ಹೋಗಲಾಡಿಸಲು ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ತಿಳುವಳಿಕೆ ನೀಡಿದರೆ, ಅದು ಸಾಧ್ಯವಾಗುವುದಿಲ್ಲ. ಪ್ರತಿಯೊಬ್ಬರೂ ಪ್ರತಿಯೊಂದು ಹಂತದಲ್ಲಿ ಜನರಿಗೆ ತಿಳುವಳಿಕೆಯನ್ನು ನೀಡಿ, ಅಂತಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವುದು ನಾಗರಿಕರ ಕರ್ತವ್ಯ ಹಾಗೂ ಸಮಾಜದ ಜವಾಬ್ದಾರಿಯು ಹೌದು ಎಂದು ಹೇಳಿದರು.

ಕಾನೂನು ಬದ್ಧವಾಗಿ ಮದುವೆ ಆಗಬೇಕು. ಹೊರತು ಕಾನೂನು ಬಾಹಿರವಾಗಿ ಮದುವೆಯಾಗಲು ಸಮಾಜದಲ್ಲಿ ಯಾರು ಸಹ ಅವಕಾಶವನ್ನು ಕೊಡಬಾರದು ಮತ್ತು ಮುಂದಿನ ವರ್ಷದಲ್ಲಿ ಧಾರವಾಡ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಿದಾಗ ಮಾತ್ರ ಅದು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದ ಸದಸ್ಯ ಕಾರ್ಯದರ್ಶಿಗಳಾಗಿರುವ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್. ದೊಡ್ಡಮನಿ ಅವರು ಅಭಿಯಾನ ಉದ್ಘಾಟಿಸಿ, ಮಾತನಾಡಿ, ಸಮಾಜದಲ್ಲಿ ಬಾಲ್ಯ ವಿವಾಹಗಳು ಜರುಗದಂತೆ ಕಟ್ಟುನಿಟ್ಟಿನ ಕ್ರಮವಹಿಸಲು ಸರ್ವೋಚ್ಛ, ಉಚ್ಛ ನ್ಯಾಯಾಲಯಗಳು ನಿರ್ದೇಶಿಸಿವೆ. ಅದರಂತೆ ಇಡೀ ದೇಶದಲ್ಲಿ ಬಾಲ್ಯ ವಿವಾಹ ಮುಕ್ತ ಭಾರತ ಮಾಡಲು ಅಭಿಯಾನವನ್ನು ಆರಂಭಿಸಲಾಗಿದೆ. ವಿಶೇಷವಾಗಿ ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ ಹಾಗೂ ಕಾರ್ಮಿಕ ಇಲಾಖೆಗಳು ಪಂಚಾಯತ ರಾಜ್ ಇಲಾಖೆಯೊಂದಿಗೆ ಕೈಜೋಡಿಸಿ, ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು.

ವೇದಿಕೆಯಲ್ಲಿ ಪ್ರೋಬೇಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಿ.ವಾಯ್. ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಎಚ್.ಎಚ್.ಕುಕನೂರ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಮ್.ಹೊನಕೇರಿ, ಡಿವೈಎಸ್‍ಪಿ ವಿನೋದ ಮುಕ್ತೇದಾರ ಉಪಸ್ಥಿತರಿದ್ದರು.

Tags:

error: Content is protected !!