ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಇಂದು ರಕ್ತಸಿಕ್ತ ಅಧ್ಯಾಯವೊಂದು ನಡೆದಿದೆ. ಟಂ-ಟಂ ಮತ್ತು ಬುಲೇರೋ ಪಿಕಪ್ ವಾಹನಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಜಿಲ್ಲೆಯಾದ್ಯಂತ ಶೋಕ ಮಡುಗಟ್ಟಿದೆ.

ಸಿಂಧನೂರು ತಾಲೂಕಿನ ಬೂದಿವಾಳ ಕ್ಯಾಂಪ್ ಸಮೀಪ ಈ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಆಂಧ್ರಪ್ರದೇಶ ಮೂಲದ ಸಾರ್ವಜನಿಕರನ್ನು ಹೊತ್ತೊಯ್ಯುತ್ತಿದ್ದ ಟಂ-ಟಂ ವಾಹನಕ್ಕೆ ಎದುರಿನಿಂದ ಬಂದ ಬುಲೇರೋ ಪಿಕಪ್ ವಾಹನ ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಆರು ಮಂದಿ ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟವರ ಹಾಗೂ ಗಾಯಾಳುಗಳ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.
ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಸ್ಥಳೀಯರ ನೆರವಿನೊಂದಿಗೆ ಸಿಂಧನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ರಸ್ತೆಯಲ್ಲಿದ್ದ ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
