ಕುಟುಂಬ ಸಮೇತ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ, ಮಹಿಳೆಯರು ಹಾಗೂ ಮಕ್ಕಳು ಸೇರಿ ಹಲವರು ಗಾಯಗೊಂಡಿರುವ ಘಟನೆ ಅಥಣಿ–ಜಮಖಂಡಿ ರಾಜ್ಯ ಹೆದ್ದಾರಿಯ ಅಥಣಿ ತಾಲೂಕಿನ ರಡ್ಡೆರಟ್ಟಿ ಗ್ರಾಮದ ಸಮೀಪ ನಡೆದಿದೆ.

ಪ್ರಾಥಮಿಕ ಮಾಹಿತಿಯಂತೆ, ಟ್ರ್ಯಾಕ್ಟರ್ ಚಾಲಕನ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಟ್ರ್ಯಾಕ್ಟರ್‌ನಲ್ಲಿ ಅತಿಯಾಗಿ ಸೌಂಡ್ ವ್ಯವಸ್ಥೆ ಅಳವಡಿಸಲಾಗಿದ್ದು, ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಕಾರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದಲ್ಲಿ ತಾವಂಶಿ ಮೂಲದ ಕುಟುಂಬದವರು ಪ್ರಯಾಣಿಸುತ್ತಿದ್ದರು. ಕಾರ್‌ನಲ್ಲಿದ್ದ ಐವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಮಹಿಳೆಯರು ಹಾಗೂ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ತಕ್ಷಣ ಧಾವಿಸಿ ಗಾಯಾಳುಗಳನ್ನು ರಕ್ಷಿಸಿ ಅಥಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವು ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದಿಂದಾಗಿ ಕೆಲ ಕಾಲ ರಾಜ್ಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.
