ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಸುವರ್ಣ ಸೌಧದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಕುರಿತು ಸುದೀರ್ಘ ಪರಿಶೀಲನೆ ನಡೆಸಿದರು. ಗೋಕಾಕ್‌ನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಚಿವರು, ಜಿಲ್ಲೆಯ ಪ್ರಮುಖ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಹೆಲಿಕಾಪ್ಟರ್ ಮೂಲಕ ಗೋಕಾಕ್‌ನಿಂದ ನೇರವಾಗಿ ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ಆಗಮಿಸಿ, ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಪ್ರಗತಿಯಲ್ಲಿರುವ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಕಮಿಷನರ್ ಲೋಕೇಶ್ ಕುಮಾರ್, ಎಸ್ಪಿ ಡಾ. ಕೆ. ರಾಮರಾಜನ್, ಎಸ್ಪಿ ಭೂಷಣ್ ಬೊರ್ಸೆ, ಜಿಪಂ ಸಿಇಒ ರಾಹುಲ್ ಶಿಂದೆ ಹಾಗೂ ಪಿಡಬ್ಲ್ಯುಡಿ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಜಿಲ್ಲೆಯ ರಸ್ತೆ ಅಭಿವೃದ್ಧಿ, ಆರೋಗ್ಯ ಸೇವೆ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಚರ್ಚಿಸಿದ ಸಚಿವರು, ಬಾಕಿ ಇರುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಶೀಘ್ರವೇ ಪೂರ್ಣಗೊಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಿ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಅವರು ಎಚ್ಚರಿಕೆ ನೀಡಿದರು. ಸಭೆಯ ನಂತರ ಸಚಿವ ಸತೀಶ್ ಜಾರಕಿಹೊಳಿ ಅವರು ಶಾಸಕ ಆಸೀಫ್ ಸೇಠ್ ಮತ್ತು ಬಾಬಾಸಾಹೇಬ್ ಪಾಟೀಲ್ ಅವರೊಂದಿಗೆ ಹೆಲಿಕಾಪ್ಟರ್ ಮೂಲಕ ಬಳ್ಳಾರಿಗೆ ಪ್ರಯಾಣ ಬೆಳೆಸಿದರು.
