ಮಂಗಳೂರು ಪ್ರವಾಸದಲ್ಲಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಇಂದು ರಾಜ್ಯದ ಎರಡು ಪ್ರಮುಖ ವಿದ್ಯಮಾನಗಳ ಕುರಿತು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ದಲಿತ ಮಹಿಳೆಯ ಮನೆ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕಾನೂನು ಕ್ರಮದ ಭರವಸೆ ನೀಡಿದ ಅವರು, ಇತ್ತ ಸಚಿವ ಹೆಚ್.ಸಿ. ಮಹದೇವಪ್ಪ ಅವರ ‘ದಲಿತ ಸಿಎಂ’ ಹೇಳಿಕೆಯ ಬಗ್ಗೆಯೂ ಮಾರ್ಮಿಕವಾಗಿ ಉತ್ತರಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಹಿಂದೂ ಧರ್ಮದ ದಲಿತ ಮಹಿಳೆಯ ಮನೆ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣವನ್ನು ಗೃಹ ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, “ಈಗಾಗಲೇ ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಸಂತ್ರಸ್ತ ಮಹಿಳೆ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದರಿಂದ, ಪೊಲೀಸರು ಪಿಸಿಆರ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಿದ್ದಾರೆ. ಕಾನೂನು ಬಾಹಿರ ಚಟುವಟಿಕೆ ನಡೆಸುವವರ ವಿರುದ್ಧ ಪೊಲೀಸರು ಮುಲಾಜಿಲ್ಲದೆ ಕ್ರಮ ಜರುಗಿಸುತ್ತಾರೆ” ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಸಚಿವ ಹೆಚ್.ಸಿ. ಮಹದೇವಪ್ಪ ಅವರ ‘ದಲಿತ ಸಿಎಂ’ ಆಕಾಂಕ್ಷೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, “ಮಹದೇವಪ್ಪ ಅವರು ಸಮರ್ಥ ನಾಯಕರಾಗಿದ್ದು, ಯಾವುದೇ ಜವಾಬ್ದಾರಿ ನಿಭಾಯಿಸುವ ಶಕ್ತಿ ಅವರಿಗಿದೆ. ಅವರ ಬೆಂಬಲಿಗರು ಅಭಿಪ್ರಾಯ ವ್ಯಕ್ತಪಡಿಸುವುದರಲ್ಲಿ ತಪ್ಪಿಲ್ಲ. ಆದರೆ, ನಮ್ಮಲ್ಲಿ ಹೈಕಮಾಂಡ್ ಎಂಬ ವ್ಯವಸ್ಥೆಯಿದೆ. ಹತ್ತು ಜನ ಜೈಕಾರ ಹಾಕಿದಾಕ್ಷಣ ಏನೂ ಆಗಲ್ಲ, ಅಂತಿಮ ತೀರ್ಮಾನ ಹೈಕಮಾಂಡ್ ಮಾಡುತ್ತದೆ. ಸದ್ಯಕ್ಕೆ ರಾಜ್ಯದಲ್ಲಿ ದಲಿತ ಸಿಎಂ ಚರ್ಚೆಯೇ ಇಲ್ಲ, ನಮ್ಮ ಗಮನ ಕೇವಲ ಆಡಳಿತದ ಮೇಲಿದೆ” ಎಂದು ಮಾರ್ಮಿಕವಾಗಿ ನುಡಿದರು.
