Bagalkot

ಬಾಗಲಕೋಟೆಯಲ್ಲಿ ಶಿವ ಜಯಂತಿ ವೇಳೆ ಕಲ್ಲು ತೂರಾಟ: ಎಂಟು ಜನರ ಬಂಧನ, ನಿಷೇಧಾಜ್ಞೆ ಜಾರಿ

Share

ಬಾಗಲಕೋಟೆಯ ಹಳೆ ಪೇಟೆಯ ಪಂಕಾ ಮಸೀದಿ ಬಳಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ಮತ್ತು ಚಪ್ಪಲಿ ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಿದ್ದಾರ್ಥ ಗೋಯಲ್ ಸೇರಿದಂತೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪರಿಸ್ಥಿತಿ ಸದ್ಯ ನಿಯಂತ್ರಣದಲ್ಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಫೆಬ್ರವರಿ 24ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಗುರುವಾರ ತಡರಾತ್ರಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಮೆರವಣಿಗೆ ಪಂಕಾ ಮಸೀದಿ ಬಳಿ ಸಾಗುತ್ತಿದ್ದಾಗ, ಮಸೀದಿಯಲ್ಲಿದ್ದ ಯುವಕರ ಗುಂಪೊಂದು ಕಲ್ಲು ಮತ್ತು ಚಪ್ಪಲಿಗಳನ್ನು ಎಸೆದಿದೆ. ಡಿಜೆ ಆಪರೇಟರ್ ಹಾಗೂ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಲಾಗಿದ್ದು, ಘಟನೆಯ ದೃಶ್ಯಗಳು ಪೊಲೀಸರ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿವೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಮೆರವಣಿಗೆ ಶಾಂತಿಯುತವಾಗಿ ಮುಕ್ತಾಯಗೊಳ್ಳಲು ಸಹಕರಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಸಿದ್ದಾರ್ಥ ಗೋಯಲ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಕಲ್ಲು ತೂರಾಟ ನಡೆಸಿದ ಪ್ರಮುಖ ಆರೋಪಿ ತಂಜೀರ್ ಸೇರಿದಂತೆ ಒಟ್ಟು ಎಂಟು ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಸಾರ್ವಜನಿಕ ಶಾಂತಿ ಭಂಗ ತಂದ ಹಿನ್ನೆಲೆಯಲ್ಲಿ ಇವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಘಟನಾ ಸ್ಥಳವಾದ ಕಿಲ್ಲಾ ಗಲ್ಲಿ ಹಾಗೂ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಘಟನೆಯನ್ನು ಖಂಡಿಸಿರುವ ಹಿಂದೂ ಮುಖಂಡರು ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆ ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 163ರ ಅಡಿ ಬಾಗಲಕೋಟೆ, ನವನಗರ ಮತ್ತು ವಿದ್ಯಾಗಿರಿ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಸಾರ್ವಜನಿಕರು ಗುಂಪು ಸೇರುವುದು ಹಾಗೂ ಅನುಮತಿ ಇಲ್ಲದೆ ಸಭೆ ನಡೆಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

Tags:

error: Content is protected !!