1. ಹಾರುಗೋಪ್ಪ ಕೆರೆ ಅಭಿವೃದ್ಧಿಗೆ ಭೂಮಿ ಪೂಜೆ
2. 3.80 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ
3. ಶಾಸಕ ಮಹಾಂತೇಶ ಕೌಜಲಗಿಗೆ ಆತ್ಮೀಯ ಸನ್ಮಾನ
4. ಗ್ರಾಮದ ಅಭಿವೃದ್ಧಿಗೆ ಶಾಸಕರಿಗೆ ಮನವಿ ಸಲ್ಲಿಕೆ

ಬೈಲಹೊಂಗಲ ಮತಕ್ಷೇತ್ರದ ಹಾರುಗೋಪ್ಪ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಸಂಚಲನ ಮೂಡಿದೆ. ಸುಮಾರು 3 ಕೋಟಿ 80 ಲಕ್ಷ ರೂಪಾಯಿ ವೆಚ್ಚದ ಕೆರೆ ಪುನಶ್ಚೇತನ ಕಾಮಗಾರಿಗೆ ಶಾಸಕ ಮಹಾಂತೇಶ ಕೌಜಲಗಿ ಅವರು ಚಾಲನೆ ನೀಡಿದ್ದಾರೆ. ಈ ಮೂಲಕ ಗ್ರಾಮದ ಬಹುದಿನಗಳ ಬೇಡಿಕೆಗೆ ಮನ್ನಣೆ ದೊರೆತಿದೆ.
ಹಾರುಗೋಪ್ಪ ಗ್ರಾಮದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ, ಸಣ್ಣ ನೀರಾವರಿ ಇಲಾಖೆಯಡಿ ಕೈಗೊಳ್ಳಲಿರುವ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹಾಂತೇಶ ಕೌಜಲಗಿ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರ ಹಾಗೂ ಗ್ರಾಮದ ಹಿತದೃಷ್ಟಿಯಿಂದ ಕೆರೆ ಅಭಿವೃದ್ಧಿ ಅನಿವಾರ್ಯವಾಗಿದ್ದು, ಗುಣಮಟ್ಟದ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಗುತ್ತೇದಾರರಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರ್ಯಕ್ರಮದಲ್ಲಿ ನಾಗಪ್ಪ ಅಷ್ಟಗಿ ಸೇರಿದಂತೆ ಸಣ್ಣ ನೀರಾವರಿ ಇಲಾಖೆಯ ಎಂ.ಆರ್. ಪಾಟೀಲ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಭೂಮಿ ಪೂಜೆಯ ನಂತರ, ಗ್ರಾಮ ಪಂಚಾಯತ್ ಆವರಣದಲ್ಲಿ ಶಾಸಕರಿಗೆ ಗ್ರಾಮದ ಹಿರಿಯರು ಆತ್ಮೀಯವಾಗಿ ಸನ್ಮಾನಿಸಿದರು. ಈ ವೇಳೆ ಗ್ರಾಮಸ್ಥರು ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಶಾಸಕರಿಗೆ ಮನವಿ ಸಲ್ಲಿಸಿ, ಗ್ರಾಮದ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಗ್ರಾಮದ ಚುನಾಯಿತ ಪ್ರತಿನಿಧಿಗಳು, ಪಂಚಾಯತ್ ಸಿಬ್ಬಂದಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಮತ್ತು ಹಿರಿಯರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
