ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ನराधಮನಿಗೆ ಬೆಳಗಾವಿಯ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ. ಶಾಲೆಯಿಂದ ಮರಳುತ್ತಿದ್ದ ಬಾಲಕಿಯನ್ನು ಕಾರಿನಲ್ಲಿ ಕೂರಿಸಿಕೊಂಡು ಅಸಭ್ಯವಾಗಿ ವರ್ತಿಸಿದ್ದ ಆರೋಪಿಗೆ 5 ವರ್ಷ ಜೈಲು ಮತ್ತು ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ.

ಬೆಳಗಾವಿಯ ಮಣ್ಣೂರ ನಿವಾಸಿ ರಾಮಾ ಮುಕುಂದ ತರಳೆ (45) ಎಂಬಾತನಿಗೆ ಪೋಕ್ಸೋ ಕಾಯ್ದೆಯಡಿ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 2023ರ ಮಾರ್ಚ್ನಲ್ಲಿ ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕಿಯನ್ನು ತನ್ನ ಕಾರಿನಲ್ಲಿ ಹತ್ತಿಸಿಕೊಂಡಿದ್ದ ಈತ, ಕಾರು ಚಾಲನೆ ಕಲಿಸುವ ನೆಪದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಸಂಬಂಧ ಕಾಕತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಮತ್ತು ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಕಿರಣಕುಮಾರ ತಾವರಗಿ ಅವರು ಅಚ್ಚುಕಟ್ಟಾಗಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಸಿ.ಎಂ. ಪುಷ್ಪಲತಾ ಅವರು, ಆರೋಪಿತನ ವಿರುದ್ಧದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ 5 ವರ್ಷಗಳ ಶಿಕ್ಷೆ ಹಾಗೂ 10,000 ರೂಪಾಯಿ ದಂಡ ವಿಧಿಸಿ ಅಂತಿಮ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರವಾಗಿ ಎಲ್.ವಿ. ಪಾಟೀಲ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು. ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಿದ ಎಸಿಪಿ ಗಂಗಾಧರ ಟಿ.ಎಂ., ಪಿಐ ಕಿರಣಕುಮಾರ ತಾವರಗಿ ಹಾಗೂ ಅವರ ತಂಡದ ಕಾರ್ಯವನ್ನು ಬೆಳಗಾವಿ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.
