ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಪೈಪ್ ತುಂಬಿಕೊಂಡು ಸಾಗುತ್ತಿದ್ದ ಗೂಡ್ಸ್ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ. ದೇವದುರ್ಗ ಕಡೆಗೆ ಹೊರಟಿದ್ದ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಘಟನೆಯ ಪರಿಣಾಮವಾಗಿ ವಾಹನದಲ್ಲಿದ್ದ ಪೈಪ್‌ಗಳು ರಸ್ತೆ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಕೆಲಕಾಲ ಸಂಚಾರಕ್ಕೂ ಅಡಚಣೆ ಉಂಟಾಯಿತು.
ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಅವನಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಗಾಯಗೊಂಡ ಚಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಬಸವನ ಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಸವನ ಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

