Kittur

ಪ್ರಾಂಶುಪಾಲರ ವಿರುದ್ಧ ಕಿತ್ತೂರು ಕಾಲೇಜು ವಿದ್ಯಾರ್ಥಿಗಳ ಬಂಡಾಯ; ರಾಜೀನಾಮೆಗೆ ಆಗ್ರಹಿಸಿ ಬೀದಿಗಿಳಿದ ಯುವಶಕ್ತಿ!

Share

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಗ ಹೈಡ್ರಾಮಾ ಶುರುವಾಗಿದೆ. ಪ್ರಾಂಶುಪಾಲರು ಹಾಗೂ ಕೆಲವು ಉಪನ್ಯಾಸಕರ ಧೋರಣೆಯಿಂದ ಬೇಸತ್ತ ವಿದ್ಯಾರ್ಥಿಗಳು ಸೋಮವಾರ ಕಾಲೇಜು ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳ ಈ ಹೋರಾಟಕ್ಕೆ ವಿವಿಧ ಸಂಘಟನೆಗಳು ಸಾಥ್ ನೀಡಿದ್ದು, ಕಾಲೇಜಿನ ಪರಿಸ್ಥಿತಿ ಈಗ ಬೂದಿ ಮುಚ್ಚಿದ ಕೆಂಡದಂತಿದೆ.

ಚನ್ನಮ್ಮನ ಕಿತ್ತೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಕೆಲ ಉಪನ್ಯಾಸಕರ ನಿರ್ಲಕ್ಷ್ಯ ಧೋರಣೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಕಾಲೇಜು ಆವರಣದಲ್ಲಿ ಜಮಾಯಿಸಿದ ನೂರಾರು ವಿದ್ಯಾರ್ಥಿಗಳು, ಪ್ರಾಂಶುಪಾಲರ ವಿರುದ್ಧ ಘೋಷಣೆ ಕೂಗಿ ಅವರ ರಾಜೀನಾಮೆಗೆ ಪಟ್ಟು ಹಿಡಿದರು. ಈ ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ರುದ್ರಗೌಡ ಪಾಟೀಲ್ ಹಾಗೂ ಸದಸ್ಯರು ಬೆಂಬಲ ಸೂಚಿಸಿದ್ದು, ಆಡಳಿತ ಮಂಡಳಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕಾಲೇಜಿನಲ್ಲಿ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ನಡೆಸುತ್ತಿಲ್ಲ ಎಂದು ಆರೋಪಿಸಿದ ವಿದ್ಯಾರ್ಥಿಗಳು, ಇತ್ತೀಚೆಗೆ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಅವರು ನಿಧನರಾದಾಗ ಕನಿಷ್ಠ ಮೌನಾಚರಣೆ ಮಾಡುವ ಸೌಜನ್ಯವನ್ನೂ ಕಾಲೇಜು ತೋರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಒಂದು ವೇಳೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಮಾರ್ಚ್ 12ರಂದು ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ. ಈ ಮಧ್ಯೆ, ತನ್ನ ಮೇಲಿನ ಎಲ್ಲಾ ಆರೋಪಗಳನ್ನು ತಳ್ಳಿಹಾಕಿರುವ ಪ್ರಾಂಶುಪಾಲರು, ವಿದ್ಯಾರ್ಥಿಗಳ ದೂರುಗಳು ಸತ್ಯಕ್ಕೆ ದೂರವಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ.

Tags:

error: Content is protected !!