ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ಭಾನುವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 12ಕ್ಕೂ ಹೆಚ್ಚು ಅಂಗಡಿ ಮುಂಗಟ್ಟುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.

ಜುಗೂಳ ಗ್ರಾಮದ ಪ್ಯಾಟೆ ಓಣಿಯಲ್ಲಿ ರಾತ್ರಿ ಸುಮಾರು 1 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಅಗ್ನಿ ವ್ಯಾಪಿಸಿ ಅಂಗಡಿಗಳನ್ನು ಆವರಿಸಿಕೊಂಡಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂಟ್ನಿಂದಲೇ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ವ್ಯಕ್ತವಾಗಿದೆ.

ಅಗ್ನಿ ಅವಘಡದ ಪರಿಣಾಮವಾಗಿ 12 ಅಂಗಡಿಗಳು ಸಂಪೂರ್ಣವಾಗಿ ಕರಕಲಾಗಿದ್ದು, ವ್ಯಾಪಾರಿಗಳಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ. ಘಟನೆಯಲ್ಲಿ ಅಂದಾಜು ಒಂದು ಕೋಟಿಗೂ ಅಧಿಕ ಮೊತ್ತದ ಹಾನಿಯಾಗಿರುವುದಾಗಿ ತಿಳಿದುಬಂದಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅವರ ತ್ವರಿತ ಕ್ರಮದಿಂದ ಇನ್ನಷ್ಟು ಅಂಗಡಿಗಳಿಗೆ ಬೆಂಕಿ ವ್ಯಾಪಿಸುವುದನ್ನು ತಡೆಯಲಾಗಿದೆ.
ಘಟನೆ ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
