State

ದೆಹಲಿಗೆ ‘ಕೈ’ ಶಾಸಕರ ದಂಡು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ

Share

ರಾಜ್ಯದಲ್ಲಿ ಕುರ್ಚಿ ಕದನದ ನಡುವೆಯೇ ಈಗ ಸಂಪುಟ ವಿಸ್ತರಣೆಯ ಕಿಚ್ಚು ಹತ್ತಿಕೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಹಿರಿಯ ಶಾಸಕರು ಹೈಕಮಾಂಡ್ ಭೇಟಿಗೆ ಸಜ್ಜಾಗಿದ್ದು, ನಾಳೆ 15ಕ್ಕೂ ಹೆಚ್ಚು ಶಾಸಕರು ದೆಹಲಿಗೆ ವಿಮಾನ ಏರಲಿದ್ದಾರೆ.

ಕರ್ನಾಟಕ ರಾಜಕಾರಣದಲ್ಲಿ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆಯ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ತಮಗೂ ಸಚಿವ ಸ್ಥಾನ ನೀಡಬೇಕೆಂದು ಪಟ್ಟು ಹಿಡಿದಿದ್ದು, ನಾಳೆ ದೆಹಲಿಗೆ ಪ್ರಯಾಣ ಬೆಳೆಸಲು ನಿರ್ಧರಿಸಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದ ಶಾಸಕರಿಗೆ, ಹೈಕಮಾಂಡ್ ಗಮನ ಸೆಳೆಯುವಂತೆ ಸಿಎಂ ಸೂಚಿಸಿದ ಹಿನ್ನೆಲೆಯಲ್ಲಿ ಈ ದೆಹಲಿ ನಡಿಗೆ ಮಹತ್ವ ಪಡೆದುಕೊಂಡಿದೆ. ಬೆಂಗಳೂರಿನಲ್ಲಿ ಮಾತನಾಡಿದ ಹಿರಿಯ ಶಾಸಕ ಟಿ.ಬಿ. ಜಯಚಂದ್ರ, ಅಧಿವೇಶನದ ವೇಳೆಯೇ ಹಿರಿಯ ನಾಯಕರು ಸಭೆ ಸೇರಿ ವರಿಷ್ಠರ ಭೇಟಿಗೆ ತೀರ್ಮಾನಿಸಲಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಗಳು ಮುಗಿದಿದ್ದು, ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ನಾಳೆ ಸುಮಾರು 38 ರಿಂದ 40 ಶಾಸಕರು ದೆಹಲಿಗೆ ತೆರಳುವ ನಿರೀಕ್ಷೆಯಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ಮನವಿ ಸಲ್ಲಿಸಲಿದ್ದಾರೆ. ಈ ಬೆಳವಣಿಗೆಯು ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದ್ದು, ಯಾರಿಗೆ ಅದೃಷ್ಟ ಒಲಿಯಲಿದೆ ಎಂಬ ಕುತೂಹಲ ಮೂಡಿಸಿದೆ.

Tags:

error: Content is protected !!