ಬಿಜೆಪಿಯ ಗ್ಯಾರಂಟಿ ವಿರೋಧಿ ನಿಲುವಿನ ವಿರುದ್ಧ ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎನ್ನುವ ಬಿಜೆಪಿ ನಾಯಕರ ಹೇಳಿಕೆಗೆ ಟಾಂಗ್ ನೀಡಿರುವ ಸಿಎಂ, ಆರ್ಥಿಕ ಮತ್ತು ಸಾಮಾಜಿಕ ಬಲ ನೀಡುವುದು ಬಿಜೆಪಿಗೆ ಅಭಿವೃದ್ಧಿಯಂತೆ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಬಾಗಲಕೋಟೆಯಲ್ಲಿಂದು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿಗರು ಮೊದಲಿನಿಂದಲೂ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಪ್ರಧಾನಿ ಮೋದಿ ಅವರು ಕೂಡ ರಾಜಸ್ಥಾನದಲ್ಲಿ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಆದರೆ, ಅಭಿವೃದ್ಧಿ ಎಂದರೆ ಕೇವಲ ರಸ್ತೆ, ಸೇತುವೆಗಳನ್ನು ನಿರ್ಮಿಸುವುದು ಮಾತ್ರವಲ್ಲ, ಜನರ ಕೈಗೆ ಆರ್ಥಿಕ ಶಕ್ತಿ ನೀಡುವುದು ಕೂಡ ಅಭಿವೃದ್ಧಿಯ ಭಾಗವೇ ಆಗಿದೆ ಎಂದು ಸಿಎಂ ಪ್ರತಿಪಾದಿಸಿದರು.
ನಮ್ಮ ಗ್ಯಾರಂಟಿ ಯೋಜನೆಗಳು ಸರ್ವ ಜನಾಂಗದ ಬಡವರಿಗಾಗಿ ಜಾರಿಯಾಗಿವೆ. ಸಾಮಾಜಿಕ ಕ್ಷೇತ್ರದಲ್ಲಿ ಮಾಡುವ ಹೂಡಿಕೆಯೂ ಅಭಿವೃದ್ಧಿಯೇ ಆಗಿದೆ ಎಂಬುದು ಬಿಜೆಪಿಗೆ ಅರ್ಥವಾಗುತ್ತಿಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು. ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಿರೀಕ್ಷೆಗೂ ಮೀರಿ ಜನರ ಸ್ಪಂದನೆ ಪಡೆಯುತ್ತಿದ್ದು, ಗೆಲುವು ನಮ್ಮದೇ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರಚಾರದ ನಡುವೆಯೇ ಮುಚ್ಚಖಂಡಿಯ ದುರ್ಗಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ, ಬಳಿಕ ವಿವಿಧ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.
