ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಮತ್ತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೊಸಬರಿಗೆ ಅವಕಾಶ ಸಿಗಬೇಕು ಎನ್ನುವ ಮೂಲಕ ಪರೋಕ್ಷವಾಗಿ ಬದಲಾವಣೆಯ ಸುಳಿವು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಮಹತ್ವದ ಪ್ರತಿಕ್ರಿಯೆ ನೀಡಿದರು. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಮತ್ತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ ಅವರು, ಯಾವಾಗ ಏನಾಗಬೇಕೋ ಅದು ಆಗುತ್ತದೆ ಎಂಬ ಡಿ ಕೆ ಶಿವಕುಮಾರ್ ಅವರ ಹೇಳಿಕೆಗೆ ಸಹಮತ ವ್ಯಕ್ತಪಡಿಸಿದರು. ಸಂಪುಟ ಪುನಾರಚನೆಯಾಗಬೇಕು ಮತ್ತು ಬೇರೆಯವರಿಗೂ ಸಚಿವ ಸ್ಥಾನದ ಅವಕಾಶ ಸಿಗಬೇಕು ಎಂಬ ನಿರೀಕ್ಷೆ ಇದೆ ಎಂದು ತಿಳಿಸಿದ ಸಚಿವರು, ಈ ಬಗ್ಗೆ ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳು ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ಹಾಗೂ ಪಕ್ಷ ಏನೇ ನಿರ್ಧಾರ ತೆಗೆದುಕೊಂಡರೂ ನಾವು ಅದಕ್ಕೆ ಬದ್ಧರಾಗಿರುತ್ತೇವೆ ಎಂದರು. ಅಧಿಕಾರ ಬಿಟ್ಟುಕೊಡುವ ವಿಚಾರದಲ್ಲಿ ಪ್ರತಿಯೊಬ್ಬರ ಬಳಿಯೂ ದೊಡ್ಡತನ ಇರಬೇಕು ಎಂದು ಅವರು ಇದೇ ವೇಳೆ ಮಾರ್ಮಿಕವಾಗಿ ನುಡಿದರು.
ಇನ್ನು ಕೋವಿಡ್ ಸಮಯದ ಹಗರಣದ ಬಗ್ಗೆ ಮಾತನಾಡಿದ ಅವರು, ಕುನ್ಹಾ ಆಯೋಗದಿಂದ ತನಿಖೆ ನಡೆಯುತ್ತಿದ್ದು ಅಂದು ಸಾಕಷ್ಟು ಹಣ ದುರುಪಯೋಗವಾಗಿರುವುದು ಕಣ್ಣಿಗೆ ಕಾಣುತ್ತಿದೆ ಎಂದು ಆರೋಪಿಸಿದರು. ಸಾಕ್ಷಿ ಆಧಾರಗಳ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು, ಆರೋಗ್ಯ ಇಲಾಖೆಯ ಸುಧಾರಣೆಗೆ ಸಂಬಂಧಿಸಿದಂತೆ 225 ವೈದ್ಯರ ನೇಮಕಕ್ಕೆ ಅನುಮೋದನೆ ಸಿಕ್ಕಿದ್ದು ಕೂಡಲೇ ಸಿಬ್ಬಂದಿ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಸರ್ಕಾರಿ ಔಷಧಿಗಳೇ ಇರಬೇಕು ಎಂಬುದು ನಮ್ಮ ಉದ್ದೇಶವಾಗಿದ್ದು, ಜೆನರಿಕ್ ಮಳಿಗೆಗಳ ವಿಚಾರವಾಗಿ ಕೆಲವರು ಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ಮಾಹಿತಿ ನೀಡಿದರು. ಬೇಸಿಗೆಯ ಹಿನ್ನೆಲೆಯಲ್ಲಿ ಹೀಟ್ ಸ್ಟ್ರೋಕ್ ತಡೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಬೆಡ್ ಮೀಸಲಿಡಲಾಗಿದ್ದು, ತುರ್ತು ಚಿಕಿತ್ಸೆಗೆ ಅಗತ್ಯ ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ಸಚಿವರು ವಿವರಿಸಿದರು.
