ಬೆಳಗಾವಿ ನಗರದಲ್ಲಿ ನಡೆಯಲಿರುವ ಡಿ.ಎಲ್.ಇಡಿ ಪೂರಕ ಪರೀಕ್ಷೆಗಳು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಯಲು ಪೊಲೀಸ್ ಇಲಾಖೆ ಸಜ್ಜಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ ಯಾವುದೇ ಅಕ್ರಮಗಳು ನಡೆಯದಂತೆ ತಡೆಯಲು ನಗರ ಪೊಲೀಸ್ ಆಯುಕ್ತರು 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

ಏಪ್ರಿಲ್ 27 ರಿಂದ ಮೇ 4 ರವರೆಗೆ ನಡೆಯಲಿರುವ ಡಿ.ಎಲ್.ಇಡಿ ಪ್ರಥಮ ಮತ್ತು ದ್ವಿತೀಯ ವರ್ಷದ ಪೂರಕ ಪರೀಕ್ಷೆಗಳ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಬೊರಸೆ ಭೂಷಣ್ ಗುಲಾಬರಾವ್ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಮಣ್ಣೂರಿನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ (DIET) ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಪರೀಕ್ಷಾ ಸಮಯದಲ್ಲಿ ಸಾರ್ವಜನಿಕರು ಗುಂಪು ಸೇರುವುದು ಹಾಗೂ ಅನಗತ್ಯ ಓಡಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಝೆರಾಕ್ಸ್ ಅಂಗಡಿಗಳು, ಸೈಬರ್ ಕೆಫೆ ಮತ್ತು ಇಂಟರ್ನೆಟ್ ಕೇಂದ್ರಗಳನ್ನು ಕಡ್ಡಾಯವಾಗಿ ಮುಚ್ಚಲು ಆದೇಶಿಸಲಾಗಿದೆ. ಪರೀಕ್ಷಾ ಸಿಬ್ಬಂದಿ ಮತ್ತು ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದವರಿಗೆ ಪ್ರವೇಶ ನಿರಾಕರಿಸಲಾಗಿದ್ದು, ಶಸ್ತ್ರಾಸ್ತ್ರ ಅಥವಾ ಯಾವುದೇ ಸ್ಫೋಟಕ ವಸ್ತುಗಳನ್ನು ಹೊತ್ತೊಯ್ಯುವುದನ್ನು ನಿರ್ಬಂಧಿಸಲಾಗಿದೆ. ಧ್ವನಿವರ್ಧಕಗಳ ಬಳಕೆ ಹಾಗೂ ಬಹಿರಂಗವಾಗಿ ಘೋಷಣೆ ಕೂಗುವುದಕ್ಕೂ ತಡೆ ಒಡ್ಡಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ.
