ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.

ಉಣಕಲ್‌ನ ಸಿದ್ಧಕಲ್ಯಾಣ ನಗರದಲ್ಲಿ ಈ ದುರ್ಘಟನೆ ನಡೆದಿದ್ದು, ಶ್ರಾವಣಿ ಮಾರುತಿ ಕಾಳೆ (18) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಶ್ರಾವಣಿ ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಕನಕದಾಸ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದಳು. ಆಕೆ ಸುಮಾರು 85 ಶೇಕಡಾ ಅಂಕಗಳ ನಿರೀಕ್ಷೆ ಇಟ್ಟುಕೊಂಡಿದ್ದಳು. ಆದರೆ ಫಲಿತಾಂಶದಲ್ಲಿ 77 ಶೇಕಡಾ ಅಂಕಗಳು ಬಂದ ಹಿನ್ನೆಲೆ ಮನನೊಂದು ಈ ಕೃತ್ಯಕ್ಕೆ ಮುಂದಾಗಿದ್ದಾಳೆ ಎಂದು ತಿಳಿದುಬಂದಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಘಟನೆಗೆ ಸಂಬಂಧಿಸಿದಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
