ವಿಜಯಪುರ ಜಿಲ್ಲೆಯಾದ್ಯಂತ ಕಳ್ಳತನವಾಗಿದ್ದ ಹಾಗೂ ಕಳೆದು ಹೋಗಿದ್ದ ಮೊಬೈಲ್‌ಗಳನ್ನು ಪತ್ತೆ ಮಾಡಲು ಕೈಗೊಂಡ ವಿಶೇಷ ಕಾರ್ಯಾಚರಣೆಯಲ್ಲಿ ವಿಜಯಪುರ ಜಿಲ್ಲಾ ಪೊಲೀಸರು ಮಹತ್ವದ ಸಾಧನೆ ಮಾಡಿದ್ದಾರೆ. ಕೇವಲ ಒಂದು ತಿಂಗಳ ಅವಧಿಯಲ್ಲಿ ಒಟ್ಟು 340 ಮೊಬೈಲ್‌ಗಳನ್ನು ಪತ್ತೆ ಮಾಡಿ, ಮೂಲ ಮಾಲೀಕರಿಗೆ ಹಿಂತಿರುಗಿಸಲಾಗಿದೆ.


ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಮೊಬೈಲ್‌ಗಳು ಪತ್ತೆಯಾಗಿದ್ದು, ಇದು ಜಿಲ್ಲೆಯ ಪೊಲೀಸ್ ಇಲಾಖೆಯ ದಕ್ಷ ಕಾರ್ಯಚಟುವಟಿಕೆಗೆ ಸಾಕ್ಷಿಯಾಗಿದೆ. CEIR (Central Equipment Identity Register) ವ್ಯವಸ್ಥೆಯ ಸಹಾಯದಿಂದ ಈ ಮೊಬೈಲ್‌ಗಳನ್ನು ಟ್ರ್ಯಾಕ್ ಮಾಡಿ ವಶಪಡಿಸಿಕೊಳ್ಳಲಾಗಿದೆ.
ಜಿಲ್ಲೆಯ 26 ಪೊಲೀಸ್ ಠಾಣೆಗಳ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಬಸವನ ಬಾಗೇವಾಡಿ, ಇಂಡಿ, ವಿಜಯಪುರ ನಗರ ಹಾಗೂ ಗ್ರಾಮೀಣ ಉಪ ವಿಭಾಗಗಳ ಪೊಲೀಸರು ಸಂಯುಕ್ತವಾಗಿ ಕಾರ್ಯ ನಿರ್ವಹಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಸಾರ್ವಜನಿಕರು ತಮ್ಮ ಮೊಬೈಲ್ ಕಳೆದು ಹೋದ ಕೂಡಲೇ CEIRನಲ್ಲಿ ನೋಂದಣಿ ಮಾಡಿದರೆ, ಶೀಘ್ರ ಪತ್ತೆ ಮಾಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದ್ದಾರೆ.
ಒಟ್ಟಿನಲ್ಲಿ, ಸಾರ್ವಜನಿಕರ ಸಹಕಾರ ಮತ್ತು ತಂತ್ರಜ್ಞಾನದ ಬಳಕೆಯಿಂದ ವಿಜಯಪುರ ಪೊಲೀಸರು ಮತ್ತೊಮ್ಮೆ ತಮ್ಮ ಕಾರ್ಯಕ್ಷಮತೆಯನ್ನು ಸಾಬೀತುಪಡಿಸಿದ್ದಾರೆ.
