ಮೇ 3 ರಂದು ನಡೆಯಲಿರುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET UG) ಸಂಬಂಧ ಬೆಳಗಾವಿ ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಪರೀಕ್ಷೆಯ ಪಾವಿತ್ರ್ಯತೆ ಕಾಪಾಡಲು ನಗರದ 27 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಮೇ 3 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೆಳಗಾವಿ ನಗರದ ಒಟ್ಟು 27 ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಾದ ಬೊರಸೆ ಭೂಷಣ್ ಗುಲಾಬರಾವ್ ತಿಳಿಸಿದ್ದಾರೆ. ಪರೀಕ್ಷೆಯ ವೇಳೆ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ಮತ್ತು ನಿಷ್ಪಕ್ಷಪಾತವಾಗಿ ಪರೀಕ್ಷೆ ನಡೆಸಲು ಈ ಕ್ರಮ ಕೈಗೊಳ್ಳಲಾಗಿದೆ.
ಆದೇಶದ ಅನ್ವಯ ಪರೀಕ್ಷಾ ಕೇಂದ್ರದ ಸುತ್ತ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿರ್ಬಂಧಿಸಲಾಗಿದೆ. ಅಲ್ಲದೆ, ಪರೀಕ್ಷಾ ಕೇಂದ್ರಗಳ ಸಮೀಪವಿರುವ ಸೈಬರ್ ಕೆಫೆ ಹಾಗೂ ಝೆರಾಕ್ಸ್ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಲು ಸೂಚಿಸಲಾಗಿದೆ. ಸ್ಫೋಟಕ ವಸ್ತುಗಳು, ಮಾರಕಾಸ್ತ್ರಗಳನ್ನು ಹೊತ್ತೊಯ್ಯುವುದು ಹಾಗೂ ಧ್ವನಿವರ್ಧಕಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 223 ರ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಯುಕ್ತರು ಎಚ್ಚರಿಸಿದ್ದಾರೆ.
