ಕಿತ್ತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ, ಚಾಲಕ ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಸ್ವಿಫ್ಟ್ ಡಿಜೈರ್ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಧಾರವಾಡ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬೈಕ್ ಸವಾರನಿಗೆ ಗಂಭೀರವಾಗಿ ಗಾಯವಾಗಿದ್ದು, ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಿತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
