ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನರೇಂದ್ರ ಮೋದಿ ಅವರಿಗೆ ‘ಭಯೋತ್ಪಾದಕ’ ಎಂಬ ಪದ ಬಳಕೆ ಮಾಡಿರುವುದನ್ನು ಖಂಡಿಸಿ ಗುರುವಾರ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.


ಬೆಳಗಾವಿ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದಬಬಿಜೆಪಿ ಕಾರ್ಯಕರ್ತರು ಖರ್ಗೆ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ ಘೋಷಣೆಗಳನ್ನು ಕೂಗಿದರು. ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿರುವುದು ಅಸಂವಿಧಾನಿಕ ಹಾಗೂ ರಾಜಕೀಯ ಶಿಷ್ಟಾಚಾರಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ದೇಶದ ಪ್ರಧಾನಿಯ ಬಗ್ಗೆ ಇಂತಹ ಹೇಳಿಕೆ ನೀಡುವುದು ಕಾಂಗ್ರೆಸ್ ಪಕ್ಷದ ನಿಜವಾದ ಮನೋಭಾವವನ್ನು ಬಯಲಿಗೆಳೆಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಂಚ ರಾಜ್ಯಗಳ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ನೆಲೆ ಉಳಿಸಿಕೊಳ್ಳಲು ಈ ರೀತಿಯ ವಿವಾದಾತ್ಮಕ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡರು ದೂರಿದರು. ಜನತೆ ಕಾಂಗ್ರೆಸ್ ಪಕ್ಷದ ಈ ರೀತಿಯ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತಿದ್ದು, ಮುಂದಿನ ದಿನಗಳಲ್ಲಿ ಮತದಾನದ ಮೂಲಕ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ, ಖರ್ಗೆ ಅವರು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚನೆ ಮಾಡಬೇಕು ಎಂದು ಒತ್ತಾಯಿಸಿದ ಬಿಜೆಪಿ ಕಾರ್ಯಕರ್ತರು, ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಮುರುಗೇಂದ್ರಗೌಡ ಪಾಟೀಲ್, ಕೃಷ್ಣಾ ಪಾಟೀಲ್, ಶಂಕರ, ಆರತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
