ಅಥಣಿ ತಾಲ್ಲೂಕಿನ ತಾಂವಶಿ ಗ್ರಾಮದಲ್ಲಿ ದಾರುಣ ಘಟನೆಯೊಂದು ಸಂಭವಿಸಿದೆ. ಗೃಹಪ್ರವೇಶ ಕಾರ್ಯಕ್ರಮವೊಂದರಲ್ಲಿ ಶಾಸಕ ಲಕ್ಷ್ಮಣ ಸವದಿ ಅವರ ಸಮ್ಮುಖದಲ್ಲೇ ಅವರ ಆಪ್ತ ಹಾಗೂ ಮಾಜಿ ಜಿ.ಪಂ ಅಧ್ಯಕ್ಷ ರಾವಸಾಬ ಬೇವನೂರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ತಾಂವಶಿ ಗ್ರಾಮದಲ್ಲಿ ಇಂದು ಸಂಭ್ರಮದ ಗೃಹಪ್ರವೇಶ ಕಾರ್ಯಕ್ರಮ ನಡೆಯುತ್ತಿತ್ತು. ಈ ಸಮಾರಂಭಕ್ಕೆ ಶಾಸಕ ಲಕ್ಷ್ಮಣ ಸವದಿ ಅವರೊಂದಿಗೆ ಆಪ್ತ ಮುಖಂಡ, ಶಿವನೂರ ಗ್ರಾಮದ ನಿವಾಸಿ ರಾವಸಾಬ ಬೇವನೂರ ಆಗಮಿಸಿದ್ದರು. ಆದರೆ ಕಾರ್ಯಕ್ರಮದ ನಡುವೆಯೇ ರಾವಸಾಬ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ರವಾನಿಸುವ ಪ್ರಯತ್ನ ಮಾಡಲಾಯಿತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಮೃತ ರಾವಸಾಬ ಬೇವನೂರ ಅವರು ಹಾಲುಮತ ಸಮಾಜದ ಪ್ರಭಾವಿ ಮುಖಂಡರಾಗಿದ್ದು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ದಶಕಗಳಿಂದ ಲಕ್ಷ್ಮಣ ಸವದಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಇವರ ಹಠಾತ್ ನಿಧನ
ಶಾಸಕರಿಗೆ ಹಾಗೂ ಬೆಂಬಲಿಗರಿಗೆ ಆಘಾತ ತಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಶಿವನೂರ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
