Political

ಹುಬ್ಬಳ್ಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ : ಬಿಜೆಪಿ ಪಕ್ಷದಿಂದ ಪ್ರತಿಭಟನೆ

Share

ಭೂ ಮಾಫಿಯಾ ಚಟುವಟಿಕೆಗಳು ಹಾಗೂ ರೈತರ ಮೇಲಿನ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಬಿಜೆಪಿ ಮುಖಂಡರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಪೊಲೀಸ್ ಆಯುಕ್ತರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಭೂ ಮಾಫಿಯಾಗೆ ಪೊಲೀಸ್ ಇಲಾಖೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರು.

ಶಿವು ಮೆಣಸಿನಕಾಯಿ ಹಾಗೂ ಪ್ರೀತಂ ಅರಕೇರಿ ಮಾತನಾಡಿ, ಅಮಾಯಕ ರೈತರ ಜಮೀನು ಕಬಳಿಸುವ ಉದ್ದೇಶದಿಂದಲೇ ಹಲ್ಲೆ ಪ್ರಕರಣಗಳು ನಡೆಯುತ್ತಿವೆ. ಹುಬ್ಬಳ್ಳಿ-ಧಾರವಾಡ ಭೂ ಮಾಫಿಯಾಗಳಿಗೆ ಸುರಕ್ಷಿತ ತಾಣವಾಗುತ್ತಿದೆ ಎಂದು ದೂರಿದರು.

“ಜನರ ರಕ್ಷಣೆ ಮಾಡಬೇಕಾದ ಪೊಲೀಸ್ ಇಲಾಖೆ ತನ್ನ ಕರ್ತವ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ. ರೈತರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು” ಎಂದು ಒತ್ತಾಯಿಸಿದರು.

ನಾರಾಯಣ ಜರತಾರಘರ ಮಾತನಾಡಿ, “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಶಾಂತಿಯ ನಗರವಾಗಿದ್ದ ಹುಬ್ಬಳ್ಳಿಯಲ್ಲಿ ನಡೆದ ಘಟನೆ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದೆ” ಎಂದರು.

ಸೀಮಾ ಲದ್ವಾ ಹಾಗೂ ಲಿಂಗರಾಜ ಪಾಟೀಲ ಮಾತನಾಡಿ, ರಾಜ್ಯದಲ್ಲಿ ಗುಂಡಾ ಸಂಸ್ಕೃತಿ ಹೆಚ್ಚಾಗಿದ್ದು, ಪೊಲೀಸ್ ಇಲಾಖೆ ಭೂ ಮಾಫಿಯಾಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದರು.

ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, “ನಗರದಲ್ಲಿ ಭೂ ಕಬಳಿಕೆ ಸೇರಿದಂತೆ ಅನೇಕ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಪ್ರಕರಣವನ್ನು ಸಿಸಿಬಿ ಹಾಗೂ ಸಿಒಡಿ ತನಿಖೆಗೆ ಒಪ್ಪಿಸಬೇಕು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಹು-ಧಾ ಪೊಲೀಸ್ ಆಯುಕ್ತರು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿಲ್ಲ. ಆದ್ದರಿಂದ ಅವರನ್ನು ತಕ್ಷಣ ವರ್ಗಾವಣೆ ಮಾಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹಲವಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

Tags:

error: Content is protected !!