ವಿಶ್ವ ಕಾರ್ಮಿಕ ದಿನಾಚರಣೆಯ ಅಂಗವಾಗಿ ಬೆಳಗಾವಿಯಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿದ ಸಾವಿರಾರು ಕಾರ್ಮಿಕರು, ಹಕ್ಕುಗಳ ರಕ್ಷಣೆಗಾಗಿ ಬೀದಿಗಿಳಿದು ಹೋರಾಟ ನಡೆಸಿದರು.

ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಿಂದ ಕನ್ನಡ ಸಾಹಿತ್ಯ ಭವನದವರೆಗೆ ಇಂದು ಸಿಐಟಿಯು ವತಿಯಿಂದ ಬೃಹತ್ ಮೆರವಣಿಗೆ ಆಯೋಜಿಸಲಾಗಿತ್ತು. ಕಳೆದ 12 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರ, ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ನಾಲ್ಕು ಸಂಹಿತೆಗಳನ್ನಾಗಿ ಮಾಡುವ ಮೂಲಕ ಕಾರ್ಮಿಕರ ಸೌಲಭ್ಯಗಳನ್ನು ಕಸಿದುಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಶ್ರೀಮಂತರ ಜೇಬು ತುಂಬಲು ಕಾರ್ಮಿಕರ ಹಿತ ಬಲಿ ನೀಡಲಾಗುತ್ತಿದೆ ಎಂದು ಕಿಡಿಕಾರಿದ ಸಂಘಟನೆಯ ಪ್ರಮುಖರು, ಸರ್ಕಾರದ ಆರ್ಥಿಕ ನೀತಿಗಳಿಂದ ಬೆಲೆ ಏರಿಕೆ ಮಿತಿಮೀರಿದ್ದು, ದುಡಿಯುವ ವರ್ಗ ಕೊಂಡುಕೊಳ್ಳುವ ಶಕ್ತಿ ಕಳೆದುಕೊಂಡಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಕಾರ್ಮಿಕರ ಹಿತದಲ್ಲಿ ಯಾವುದೇ ನಿರ್ಧಾರಗಳನ್ನು ಕೈಗೊಳ್ಳುತ್ತಿಲ್ಲ. ಸಮಾನ ಕೆಲಸಕ್ಕೆ ಸಮಾನ ವೇತನ ನೀಡುತ್ತಿಲ್ಲ. ಕಾಯ್ದೆ ಸುಧಾರಣೆಯಿಂದ ಕಾರ್ಮಿಕರ ಮೇಲೆ ಅನ್ಯಾಯವಾಗಿದೆ. ದುಡಿದು ತಿನ್ನುವ ಶ್ರಮಿಕ ವರ್ಗದವರಿಗೆ ಸೌಲಭ್ಯಗಳು ಸಿಗುತ್ತಿಲ್ಲ. ಕಾಯ್ದೆ ತಿದ್ದುಪಡಿಯನ್ನು ರದ್ಧು ಮಾಡಬೇಕು. ಕಾರ್ಮಿಕ ಹಿತದಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕೆಂದು ಸಿಐಟಿಯು ಅಧ್ಯಕ್ಷೆ ಮಂದಾ ನೇವಗಿ ಹೇಳಿದರು.
ಈ ಕುರಿತಾದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಿಐಟಿಯೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.
